ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಅಜೀತ್ ಭಾರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಯೂಟ್ಯೂಬರ್ ಮತ್ತು ಪತ್ರಕರ್ತ ಅಜಿತ್ ಭಾರ್ತಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞನೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದೆ. ಏನಿದು ಪ್ರಕರಣ ಇಲ್ಲಿದೆ ಓದಿ.
ಬೆಂಗಳೂರು, ಜೂನ್ 25: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಬಗ್ಗೆ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಪತ್ರಕರ್ತ ಅಜೀತ್ ಭಾರ್ತಿ (Ajeet Bharti) ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೋರಿ ಯೂಟ್ಯೂಬರ್, ಪತ್ರಕರ್ತ ಅಜಿತ್ ಭಾರ್ತಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಪತ್ರಕರ್ತ ಅಜೀತ್ ಭಾರ್ತಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ ಶ್ಯಾಮ್ ಅವರು, ಅಜಿತ್ ಭಾರ್ತಿ ಸಂವಿಧಾನ ಕೊಡಮಾಡಿರುವ ತಮ್ಮ ಮೂಲಭೂತ ಹಕ್ಕುಗಳ ಅಡಿಯಲ್ಲೇ ನಡೆದುಕೊಂಡಿದ್ದಾರೆ. ಮತ್ತು ದೂರುದಾರರ ನಡೆಯು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿಘ್ನ ಒಡ್ಡುವಂತಿದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿದರು.
ಇದನ್ನೂ ಓದಿ: ಸರ್ಕಾರದ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ
ಇದನ್ನು ಪುರಸ್ಕರಿಸಿದ ನ್ಯಾಯಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಭಿಯೋಜಕರು ತಮ್ಮ ಆಕ್ಷೇಪಣೆ ಸಲ್ಲಿಸಲಿ. ಅಲ್ಲಿಯವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಗೆ ಅನುಮತಿಸಲಾಗುವುದಿಲ್ಲ ಎಂದು ಹೇಳಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.
ಅಜೀತ್ ಭಾರ್ತಿ ವಿರುದ್ಧ ದಾಖಲಾದ ದೂರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕಾಗಿ ಕರ್ನಾಟಕದ ಬೆಂಗಳೂರಿನಲ್ಲಿ ಪತ್ರಕರ್ತ ಅಜೀತ್ ಭಾರ್ತಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಜಾಗದಲ್ಲಿ ಬಾಬರಿ ಮಸೀದಿಯನ್ನು ಮರಳಿ ತರುವುದು ರಾಹುಲ್ ಗಾಂಧಿಯವರ ಭವಿಷ್ಯದ ಯೋಜನೆ ಎಂದು ಭಾರ್ತಿ ಹೇಳಿದ್ದರು.
ಹೀಗಾಗಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಕಾನೂನು ಘಟಕದ ಕಾರ್ಯದರ್ಶಿಯಾಗಿರುವ ಬಿಕೆ ಬೋಪಣ್ಣ ಅವರು ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ