ಬೆಂಗಳೂರು, ಅಕ್ಟೋಬರ್ 01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಉರುಳಾಗಿ ಪರಿಣಮಿಸಿದೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ (Lokayukta) ಪೊಲೀಸ್ ಎಫ್ಐಆರ್ ದಾಖಲಿಸಿಕೊಂಡಿದೆ. ಇದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿವೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದಿದ್ದು, ಪ್ರತಿಪಕ್ಷಗಳ ಹೋರಾಟಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.
ಪಾರ್ವತಿ ಸಿದ್ದರಾಮಯ್ಯ ಅವರು ಬರೆದ ಪತ್ರದ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ “ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ. ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ” ಎಂದು ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ECIR ದಾಖಲು, ಸಿಎಂಗೆ ಶುರುವಾಯ್ತು ಇಡಿ ಸಂಕಷ್ಟ!
ನಿವೇಶನ ವಾಪಸ್ ನೀಡುತ್ತೇವೆ ಎಂಬ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ “ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ” ಎಂದು ಕಾಲೆಳೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ” ಎಂದು ಅಂದು ಆರ್ಭಟಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು.
ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು. ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು. ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, CBI-ED ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ.
ಹೀಗೆ ಮಾಡಿದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ. ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ. ನೀವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜಿನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:09 am, Tue, 1 October 24