SC-ST ಪ್ರಮಾಣ ಪತ್ರ ಸಭೆ: ಸಿಎಂ ಎದುರೇ ಕೈ ಶಾಸಕನ ಜಾತಿ ಸರ್ಟಿಫಿಕೇಟ್ ಬಗ್ಗೆ ಪ್ರಸ್ತಾಪಿಸಿದ ಸಚಿವ
ಕರ್ನಾಟಕ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ, ನಕಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಮಾಣಪತ್ರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸ್ವಪಕ್ಷೀಯ ಶಾಸಕರ ವಿರುದ್ಧವೇ ಆಕ್ಷೇಪ ವ್ಯಕ್ತಪಡಿಸಿದರು. ಸುಳ್ಳು ಪ್ರಮಾಣಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು, ಆಗಸ್ಟ್ 25: ಕರ್ನಾಟಕ ಹೈಕೋರ್ಟ್ (High Court) ಆದೇಶದ ಮೇರೆಗೆ, ನಕಲಿ ಎಸ್‌ಸಿ (SC) ಮತ್ತು ಎಸ್‌ಟಿ (ST) ಜಾತಿ ಪ್ರಮಾಣಪತ್ರಗಳ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಸ್ವಪಕ್ಷೀಯ ಶಾಸಕರ ವಿರುದ್ಧವೇ ತಿರುಗಿಬಿದ್ದರು. ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು. ಇದೇ ವಿಚಾರವನ್ನು ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ಅವರು ಕೂಡ ಪ್ರಸ್ತಾಪಿಸಿದರು.
ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣದ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಜಾತಿ ಪ್ರಮಾಣ ಪತ್ರ ವಿಚಾರದಲ್ಲಿ ಕೋರ್ಟ್ ಆದೇಶ ಇದೆ. ಅದೇಶ ಜಾರಿ ಮಾಡುವುದರಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದರು.
ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ವಿಚಾರದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 60 ದಿನಗಳೊಳಗಾಗಿ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಕಳೆದ 6 ತಿಂಗಳಿನಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಬೇಕು. ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಿಗೆ ತಡೆಯಾಜ್ಞೆ ಇದೆ. ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಹೇಳಿದರು.
2023ರಿಂದ ಕಳೆದ 3 ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. 4912 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 4149 ಪ್ರಕರಣಗಳಲ್ಲಿ ಮಾತ್ರ 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿರುತ್ತದೆ. 36 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ. ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು? ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಸುಳ್ಳು ಜಾತಿ ಪ್ರಮಾಣ ಪತ್ರ ಕೇಸ್: ತನಿಖೆಗೆ ಕೋರ್ಟ್ ಅಸ್ತು, ಕಾಂಗ್ರೆಸ್ ಶಾಸಕಂಗೆ ಸಂಕಷ್ಟ
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೇ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಿ. ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದೆ. ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.
ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್ ದಾಖಲಿಸಬೇಕು ಎಂದು ಹೇಳಿದರು.
ಅನುಸೂಚಿತ ಜಾತಿ ಮತ್ತು ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು 2023 ರಿಂದ ನೇಮಕ ಮಾಡಿಲ್ಲ. ಆಯೋಗದಲ್ಲಿ ಪ್ರಕರಗಳು ಬಾಕಿ ಇವೆ ಎಂದು ಸಭೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ಹೊರಹಾಕಿದರು. ಆದಷ್ಟು ಬೇಗ ಆಯೋಗಕ್ಕೆ ಅಧ್ಯಕ್ಷರ ನೇಮಕ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಛಲವಾದಿ ನಾರಾಯಣ ಸ್ವಾಮಿ ಅವರನ್ನು ಕೂಡಿಹಾಕಿದ ಪ್ರಕರಣ ಸಭೆಯಲ್ಲಿ ಪ್ರಸ್ತಾಪಿಸಿದರು. ಅಷ್ಟು ದೊಡ್ಡಮಟ್ಟದ ಗಲಾಟೆ ಆಗಿಲ್ಲ ಎಂದು ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಸರ್ಕ್ಯೂಟ್ ಹೌಸ್ನಲ್ಲಿ ಕೂಡಿಹಾಕಿದ್ದ ಫೋಟೋ, ಕಾರಿಗೆ ಮಸಿ ಬಳಿದ ಫೋಟೋ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು. ಈ ಕುರಿತು ದೂರು ದಾಖಲಿಸೋಣ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸೂಚನೆ ನೀಡಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:35 pm, Mon, 25 August 25