ಇನ್ನೂ ಒಂದು ವಾರ ರಾಜ್ಯಾದ್ಯಂತ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲಾ-ಕಾಲೇಜಿಗಳಿಗೆ ರಜೆ

ಕರ್ನಾಟಕದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ತಿಂಗಳಾಂತ್ಯದವರೆಗೆ ಮುಂದುವರೆಯಲಿದೆ. ಹೌದು..ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ​ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹಾಗೇ ಕೆಲ ಜಿಲ್ಲೆಗಳಲ್ಲಿ ನಾಳೆ(ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ರಾಜ್ಯದಲ್ಲಿ ಮಳೆ ಎಲ್ಲಿವರೆಗೆ ಮುಂದುರೆಯಲಿದೆ? ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಇನ್ನೂ ಒಂದು ವಾರ ರಾಜ್ಯಾದ್ಯಂತ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲಾ-ಕಾಲೇಜಿಗಳಿಗೆ ರಜೆ
ಮಳೆ
Image Credit source: PTI

Updated on: Jul 23, 2025 | 10:38 PM

ಬೆಂಗಳೂರು, (ಜುಲೈ 23): ಕರ್ನಾಟಕದಲ್ಲಿ (Karnataka) ಮುಂದಿನ ಒಂದು ವಾರ ಮಳೆ (rain) ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ. ಇನ್ನು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ(ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು ತಾಲೂಕಿನಾದ್ಯಂತ ರಜೆ

ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಶಾಲೆ ಕಾಲೇಜುಗಳಿಗೆ ನಾಳೆ (ಜುಲೈ 24) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಆದೇಶ ಹೊರಡಿಸಿದ್ದಾರೆ. ಹಾಗೇ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಸೂಚಿಸಿದ್ದಾರೆ. ಅಲ್ಲದೇ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ ರಜೆ ಘೋಷಣೆ

ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್‌ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿಪೂರ್ವ, ಐಟಿಐ ಕಾಲೇಜುಗಳಿಗೆ ಗುರುವಾರ(24.07.2025)ದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ.ಟಿ.ಕೆ ಆದೇಶಿಸಿದ್ದಾರೆ. ಇನ್ನು ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮುಂದಿನ 1 ವಾರ ಹಲವೆಡೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗಲಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ & ಆರೆಂಜ್​ ಅಲರ್ಟ್​​ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 23 ರಿಂದ 29 ರವರೆಗೆ ವ್ಯಾಪಕ ಮಳೆಯಾಗಲಿದೆ. ಜುಲೈ 23-27 ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 23 ರಂದು ವ್ಯಾಪಕ ಮಳೆಯಾಗಲಿದೆ. ಇನ್ನು 24 ರಿಂದ 26 ರವರಿಗೆ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ. ಜುಲೈ 23 ರಿಂದ 27 ರವರೆಗೆ ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರ ಸಾಧಾರಣ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ