ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಕೋರ್ಟ್
ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಈ ಮೂಲಕ ಮಾಜಿ ಸಚಿವ ಹೆಚ್ಡಿ ರೇವಣ್ಣ ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು, ಆಗಸ್ಟ್ 30: ಹೊಳೆನರಸೀಪುರ (Holenarasipur) ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (HD Revanna) ಅವರಿಗೆ ಹೈಕೋರ್ಟ್ (High Court) ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದ್ದಾರೆ.
ಹೆಚ್ಡಿ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್ಐಆರ್ ದಾಖಲಿಸುವಂತಿಲ್ಲ. ನಾಲ್ಕು ವರ್ಷಗಳ ಹಿಂದಿನ ದೂರಿಗೆ ಈಗ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ 506, 509 ಸೆಕ್ಷನ್ ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ಎಫ್ಐಆರ್ ರದ್ದುಪಡಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಪ್ರಜ್ವಲ್ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್ಐಟಿ
ಸರ್ಕಾರದ ಪರ ವಾದಿಸಿದ ಎಸ್ಪಿಪಿ ರವಿವರ್ಮ ಕುಮಾರ್, ಈಗಾಗಲೇ ಆರೋಪಪಟ್ಟಿ ದಾಖಲಿಸಿರುವುದಾಗಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದರು.
ಏನಿದು ಪ್ರಕರಣ
ಹೆಚ್ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಅವರ ಮನೆಯ ಸಹಾಯಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಶಾಸಕರ ನಿವಾಸದಲ್ಲಿ ಹೆಚ್ಡಿ ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇನ್ನು ಕಿಡ್ನಾಪ್ ಕೇಸ್ನಲ್ಲಿ ಹೆಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.
ಈ ಪ್ರಕರಣವನ್ನು ರದ್ದು ಕೋರಿ ಹೆಚ್ಡಿ ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಹೆಚ್ಡಿ ರೇವಣ್ಣ ಅವರನ್ನು ವಿಚಾರಣೆ ನಡೆಸದಂತೆ ಸೂಚಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ