
ಶಿವಮೊಗ್ಗ, ಆಗಸ್ಟ್ 01: ಶಿವಮೊಗ್ಗದ ಸರ್ಕಾರಿ ಶಾಲೆಯ (Shivamogga Government School) ನೀರಿನ ಟ್ಯಾಂಕ್‌ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿ, “ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ
ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ” ಎಂದು ಪೋಸ್ಟ್ ಹಾಕಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು… pic.twitter.com/LS0PSKzJYn
— Siddaramaiah (@siddaramaiah) August 1, 2025
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತರಗತಿಗಳು ಎಂದಿನಂತೆಯೇ ಆರಂಭಗೊಂಡ ಬಳಿಕ ಮಕ್ಕಳಿಗೆ ಹಾಲು ನೀಡಲು ಬಿಸಿಯೂಟ ತಯಾರಿಕಾ ಸಿಬ್ಬಂದಿ, ಹೆಡ್ ಟ್ಯಾಂಕ್‌ನ ನೀರಿನಲ್ಲಿ ಕೈ ತೊಳೆದುಕೊಳ್ಳಲು ಹೋದಾಗ ನೀರಿನ ಬಣ್ಣದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ನೀರಿನ ವಾಸನೆ ಗಮನಿಸಿದಾಗ ಕೀಟನಾಶಕ ಬೆರೆತಿರುವ ಅನುಮಾನ ವ್ಯಕ್ತವಾಗಿತ್ತು. ಸಿಬ್ಬಂದಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಈ ವಿಷಯ ತಿಳಿಸಿದರು. ಕೂಡಲೇ ಶಾಲಾಡಳಿತ ಎಚ್ಚೆತ್ತುಕೊಂಡು, ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಬಳಿಕ ಟ್ಯಾಂಕ್‌ನ ನೀರನ್ನು ಪರೀಕ್ಷೆ ಮಾಡಿದಾಗ ಕೀಟನಾಶಕ ಬೆರೆಸಿರುವುದು ದೃಢಪಟ್ಟಿತ್ತು.
ಇದನ್ನೂ ಓದಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ವಿಷ ಬೆರೆಸಿದ ಕಿಡಿಗೇಡಿಗಳು: ತಪ್ಪಿದ ಭಾರಿ ಅನಾಹುತ
ಶಾಲೆಯ ಪಕ್ಕದಲ್ಲಿರುವ ಹಣ್ಣಿನ ಮರವನ್ನು ಹತ್ತಿದ ಕಿಡಿಗೇಡಿಗಳು ಅಲ್ಲಿಂದ ಶಾಲೆಯ ಚಾವಣಿಗೆ ಬಂದು ಪ್ಲಾಸ್ಟಿಕ್ ಬಾಟಲಿಯಲ್ಲಿ ತಂದಿದ್ದ ಕೀಟನಾಶಕವನ್ನು ನೀರಿನ ಟ್ಯಾಂಕ್‌ಗೆ ಸುರಿದಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದರು. ವಿಷ ಮಿಶ್ರಣ ಮಾಡಲು ಬಳಸಿದ್ದ ಖಾಲಿ ಬಾಟಲಿಯೊಂದು ಸ್ಥಳದಲ್ಲಿ ಪತ್ತೆಯಾಗಿತ್ತು.