
ಬೆಂಗಳೂರು: ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) (Shivamogga Subbanna) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai), ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (Dattatreya Hosabale), ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
‘ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘ಶ್ರೇಷ್ಠ ಗಾಯಕ ಸುಬ್ಬಣ್ಣ ಅವರು ಕನ್ನಡ ಹಾಡುಗಳ ಮೂಲಕ ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಸುಬ್ಬಣ್ಣ ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ. ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದು ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಅವರು ಸಹ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘ಸುಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ ಎಂಬುದು ಅಸಹನೀಯ ನೋವಿನ ಸಂಗತಿ. ಅವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು. ಶಿಶುನಾಳ ಷರೀಫರು, ಕುವೆಂಪು ಹಾಗೂ ಹಲವಾರು ಕನ್ನಡ ಕವಿಗಳ ಹಾಡುಗಳನ್ನು ಮನೆ ಮಾತಾಗಿಸಿದ ಅವರು ಸುಗಮ ಸಂಗೀತದ ದೊರೆಯಾಗಿದ್ದರು. ಇನ್ನು ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. ಗತಿಸಿದ ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ‘ ಎಂದು ದತ್ತಾತ್ರೇಯ ಹೊಸಬಾಳೆ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

‘ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖ ದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
– Pralhad Joshi (@joshipralhad) 12 Aug 2022
‘ಕಾಡು ಕುದುರೆ ಓಡಿ ಬಂದಿತ್ತಾ ಹಾಡಿನ ಮೂಲಕ ಜನಮಾನಸದಲ್ಲಿ ಉಳಿದ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣನವರ ಸಾವು ತೀವ್ರ ನೋವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ನೀಡಲಿ’ ಎಂದು ಪ್ರಲ್ಹಾದ ಜೋಶಿ ‘ಕೂ’ ಮಾಡಿದ್ದಾರೆ. ‘ಶಿವಮೊಗ್ಗ ಸುಬ್ಬಣ್ಣ ಅವರು ತಮ್ಮ ಅದ್ಭುತ ಕಂಠದ ಮೂಲಕ ಅವರು ಹೆಸರುವಾಸಿಯಾಗಿದ್ದರು’ ಎಂದು ಮುರುಗೇಶ್ ನಿರಾಣಿ ಸ್ಮರಿಸಿಕೊಂಡಿದ್ದಾರೆ.
Published On - 9:40 am, Fri, 12 August 22