ಬಿಜೆಪಿ ಸಂಸದ ಬಿವೈ ರಾಘವೇಂದ್ರ ಮತ್ತೆ ಗೆಲ್ಲಬೇಕು: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಕಾಂಗ್ರೆಶ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹಾಡಿಹೊಗಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲೂ ರಾಘವೇಂದ್ರ ಗೆಲ್ಲಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿದ್ದು, ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದಿದ್ದಾರೆ.
ಶಿವಮೊಗ್ಗ, ಜ.26: ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa), ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ (BY Raghavendra) ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಮಾತನಾಡಿದ ಅವರು, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದರು.
ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಘರ್ ವಾಪ್ಸಿ ಪ್ರಯತ್ನ: ರಾಘವೇಂದ್ರ
ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ರಾಜ್ಯಾಧ್ಯಕ್ಷರು ಘರ್ ವಾಪ್ಸಿ ಪ್ರಯತ್ನ ಮಾಡುತ್ತಿದ್ದಾರೆ, ಇದು ಪ್ರಾರಂಭ. ಇನ್ನೂ ಅನೇಕ ಪ್ರಮುಖ ನಾಯಕರು, ಪಕ್ಷ ಬಿಟ್ಟು ಹೋದವರು, ಬೇರೆ ಪಕ್ಷದಲ್ಲಿ ಇರುವವರು ಬಿಜೆಪಿ ಕಡೆ ಬರುವ ಚರ್ಚೆಯಲ್ಲಿದ್ದಾರೆ ಎಂದರು.
ಇದನ್ನೂ ಓದಿ: ನನ್ನ ಜತೆ ಕಾಮಗಾರಿ ಪರಿಶೀಲನೆಗೆ ಬರುವ ಅಧಿಕಾರಿಗಳಿಗೆ ಧಮ್ಕಿ ಹಾಕ್ತಿದ್ದಾರೆ: ಮಧು ಬಂಗಾರ ವಿರುದ್ಧ ರಾಘವೇಂದ್ರ ಗಂಭೀರ ಆರೋಪ
ಬೇರೆ ಪಕ್ಷದ ಮುಖಂಡರು ನಮ್ಮ ಮುಖಂಡರ ಜತೆ ಚರ್ಚೆಯಲ್ಲಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುವ ಕಾರ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬುವ ಸಲುವಾಗಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ