Shivamogga News: ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಶಂಕು ಸ್ಥಾಪನೆ

|

Updated on: Nov 13, 2023 | 7:36 AM

ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಮೆಗ್ಗಾನ್ ಆಸ್ಪತ್ರೆ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ಆಸ್ಪತ್ರೆಯ ಕಾಮಗಾರಿಗೆ ರೂ. 50 ಕೋಟಿ ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ.

Shivamogga News: ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಶಂಕು ಸ್ಥಾಪನೆ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲೇ ಕ್ಯಾನ್ಸರ್ ಆಸ್ಪತ್ರೆ ಆರಂಭ
Follow us on

ಶಿವಮೊಗ್ಗ, ನ.13: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ (Cancer Hospital) ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿದೆ. ಕರ್ನಾಟಕದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ (Dr. Sharan Prakash Patil) ಅವರು ಮೆಗ್ಗಾನ್ ಆಸ್ಪತ್ರೆ (McGann Hospital) ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ಆಸ್ಪತ್ರೆಯ ಕಾಮಗಾರಿಗೆ ರೂ. 50 ಕೋಟಿ ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ. ಶಿವಮೊಗ್ಗ, ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಈ ಆಸ್ಪತ್ರೆಯಿಂದ ಸಹಾಯವಾಗಲಿದೆ.

ಈ ವೇಳೆ ಮಾತನಾಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಮಲೆನಾಡು ಭಾಗದ ಶಿವಮೊಗ್ಗ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಜನರಿಗೆ ನೆರವಾಗಲಿದೆ. 120 ಹಾಸಿಗೆಗಳ ಆಸ್ಪತ್ರೆಗೆ ರಾಜ್ಯ ಸರ್ಕಾರ ₹ 50 ಕೋಟಿ ಅನುದಾನ ನೀಡಿದೆ. ಆಸ್ಪತ್ರೆಯಲ್ಲಿ ಕಿಮೋಥೆರಪಿ, ರೇಡಿಯೊಥೆರಪಿ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಾದ ಇತರ ಸೌಲಭ್ಯಗಳನ್ನು ಹೊಂದಿರುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ 25 ಸರ್ಕಾರಿ ಕಾಲೇಜುಗಳು ಸೇರಿದಂತೆ 70 ವೈದ್ಯಕೀಯ ಕಾಲೇಜುಗಳಿವೆ. ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದು ವೈದ್ಯಕೀಯ ಕಾಲೇಜು ನಿರ್ಮಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಅದೇ ರೀತಿ ಶಿವಮೊಗ್ಗ ಹೊರತುಪಡಿಸಿ ತುಮಕೂರು, ಮಂಡ್ಯ, ಮೈಸೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಪ್ರತಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ಕ್ಯಾನ್ಸರ್​ ಪ್ರಕರಣ: ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ತಜ್ಞರ ಕೊರತೆ

ಶಿವಮೊಗ್ಗ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕಡಿಮೆ ಅವಧಿಯಲ್ಲಿ ಆಸ್ಪತ್ರೆ ನಿರ್ಮಾಣ ಪೂರ್ಣಗೊಳ್ಳಲಿದೆ. ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಿದರೆ ಶಿವಮೊಗ್ಗ ಮತ್ತು ನೆರೆಯ ಜಿಲ್ಲೆಯ ಜನರು ಚಿಕಿತ್ಸೆಗಾಗಿ ಮಂಗಳೂರಿಗೆ ಹೋಗಬೇಕಾಗಿಲ್ಲ ಎಂದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ. ಸಂಗಮೇಶ್ವರ, ಡಾ.ಆರ್.ಸೆಲ್ವಮಣಿ, ಡಿಸಿ ಸ್ನೇಹಲ್ ಸುಧಾಕರ ಲೋಖಂಡೆ, ಜಿಪಂ ಸಿಇಒ ಜಿ.ಕೆ. ಮಿಥುನ್ ಕುಮಾರ್, ಎಸ್ಪಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Mon, 13 November 23