ಶಿವಮೊಗ್ಗ: ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ಹಿಂಪಡೆದು, ಈ ಹಿಂದಿನಂತೆ ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು. ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು. ಮುಖ್ಯಮಂತ್ರಿಗಳೂ ಪೂರಕವಾಗಿ ಸ್ಪಂದಿಸಿದ್ದಾರೆ. ಮಾರ್ಚ್ 4ರಂದು ಮಂಡಿಸುವ ಬಜೆಟ್ನಲ್ಲಿ ಈ ಸಂಬಂಧ ಘೋಷಣೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಣ ವೇತನ ತಾರತಮ್ಯ ಸರಿಪಡಿಸಬೇಕು ಎಂದು ಸರ್ಕಾರಿ ನೌಕರರು ಮನವಿ ಸಲ್ಲಿಸಿದರು. ಬಜೆಟ್ನ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಪ್ರಸ್ತಾವ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದರು.
ಮುಖ್ಯಮಂತ್ರಿಗೆ ಬಸವರಾಜ ಹೊರಟ್ಟಿ ಪತ್ರ
ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ (New Pension Scheme – NPS) ರದ್ದುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿ ನಂತರ ಅಗತ್ಯ ಸೌಲಭ್ಯಗಳು ಸಿಗುವುದಿಲ್ಲ. ಆರ್ಥಿಕ ಸೌಲಭ್ಯ ದೊರೆಯದೆ ಜೀವನ ಕಷ್ಟಸಾಧ್ಯವಾಗಿದೆ. ರಾಜಸ್ಥಾನ ಸರ್ಕಾರವು ಹೊಸ ಮಾದರಿಯ ಪಿಂಚಣಿ ಯೋಜನೆ ರದ್ದುಗೊಳಿಸಿದೆ. ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಬೇಕು ಎಂದು ಕೋರಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನ ಮತ್ತಿತರ ಸೌಲಭ್ಯ ನೀಡುವ ನಿಟ್ಟನಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿರುವ ತಾರತಮ್ಯಕ್ಕೆ ಅಂತ್ಯ ಹಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ನ್ಯಾಯ ಒದಗಿಸಿಕೊಡಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಭಾಪತಿ ಹೊರಟ್ಟಿ ಕೋರಿಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: NPS: ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಲು ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯ
ಇದನ್ನೂ ಓದಿ: APY Vs NPS: ಅಟಲ್ ಪಿಂಚಣಿ ಯೋಜನೆಯೋ ಅಥವಾ ಎನ್ಪಿಎಸ್ ಯಾವ ಆಯ್ಕೆ ಉತ್ತಮ?