ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಮನವಿ
ಶಿವಮೊಗ್ಗ ಏರ್‌ಪೋರ್ಟ್‌ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಆದರೆ, ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡದೆ ಮಹನೀಯರ ಹೆಸರು ನಾಮಕರಣ ಮಾಡುವಂತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯವರ ಬಳಿ ಮನವಿ ಮಾಡಿದ್ದಾರೆ.
ಶಿವಮೊಗ್ಗ: ಶಿವಮೊಗ್ಗ ಏರ್‌ಪೋರ್ಟ್‌ಗೆ (Shivamogga Airport) ತಮ್ಮ ಹೆಸರಿಡದಂತೆ ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಯಡಿಯೂರಪ್ಪ ಅವರು, ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಮಹನೀಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ.
ಶಿವಮೊಗ್ಗ ಏರ್‌ಪೋರ್ಟ್‌ಗೆ ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದ ಸಿಎಂ ಬೊಮ್ಮಾಯಿ, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದಿದ್ದರು. ಜಿಲ್ಲೆಯ ಎನ್ಇಎಸ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ, ಯಡಿಯೂರಪ್ಪ ಅವರ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡಲಿದ್ದಾರೆ ಎಂದಿದ್ದರು.
ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರಿಟ್ಟರೆ ನಮ್ಮದೇನೂ ಅಭ್ಯಂತರವಿಲ್ಲ: ಡಿಕೆ ಶಿವಕುಮಾರ್
ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಕುರಿತಾಗಿ ಮಾತನಾಡಿದ್ದ ಯಡಿಯೂರಪ್ಪ ಅವರು, ಅಂದಿನ ಸಮಾವೇಶದಲ್ಲಿ 2ರಿಂದ 3 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ನಮ್ಮ ಅಭಿವೃದ್ಧಿ ಕೆಲಸಗಳು ಇಲ್ಲಿಗೆ ನಿಲ್ಲುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು. ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:06 pm, Thu, 9 February 23