ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಇಲ್ಲಿದೆ ಬದಲಿ ಮಾರ್ಗ
ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾದ್ರೆ, ಎಷ್ಟು ದಿನಗಳ ಕಾಲ ನಿಷೇಧ ಎನ್ನುವ ವಿವರ ಇಲ್ಲಿದೆ.
ಶಿವಮೊಗ್ಗ, (ಜೂನ್ 27): ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗದ ವಿವರ ಈ ಕೆಳಗಿನಂತಿದೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾಗಿ, ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ತೀರ್ಥಹಳ್ಳಿ–ಮಾಸ್ತಿಕಟ್ಟೆ– ಸಿದ್ದಾಪುರ– ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಮೈದುಂಬಿ ಧುಮುಕುತ್ತಿರುವ ಜೋಗ್ ಫಾಲ್ಸ್
ಮಲೆನಾಡಿನ ಕೆಲಭಾಗದಲ್ಲಿ ಅಂದರೆ ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಇಂದು (ಜೂನ್ 27) ತುಂಗಾ ಜಲಾಶಯದಿಂದ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ನಾಳೆಯೂ (ಜೂನ್ 28) ಸಹ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳುವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.