ಶಿವಮೊಗ್ಗ ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆ ಶಂಕೆ, ಗೃಹ ಸಚಿವರ ತವರು ಜಿಲ್ಲೆಯಲ್ಲಿ ಉಗ್ರರ ಚಟುವಟಿಕೆ
ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ತವರು ಜಿಲ್ಲೆಯ ಮೇಲೆ ಉಗ್ರರ ಕರಿನೆರಳು ಬಿದ್ದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.
ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ (Satellite Phone) ಬಳಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ತವರು ಜಿಲ್ಲೆಯ ಮೇಲೆ ಉಗ್ರರ ಕರಿನೆರಳು ಬಿದ್ದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಸಾಗರ (ಸಿಗಂದೂರು) ಮತ್ತು ಶಿಕಾರಿಪುರ ಬಳಿ ಸ್ಯಾಟಲೈಟ್ ಫೋನ್ ಬಳಕೆಯಾಗಿರಬಹುದು ಎಂದು ಐಎಸ್ಡಿ ಅಧಿಕಾರಿಗಳು ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಸ್ಯಾಟಲೈಟ್ ಫೋನ್ ಬಳಕೆಗೆ ಈ ಎರಡು ಪ್ರದೇಶಗಳನ್ನು ಆಯ್ಕೆ ಮಾಡಿದ್ದೇಕೆ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಈ ಮೊದಲು ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ಅರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿತ್ತು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಪ್ರವಾಸಿಗರ ಸೋಗಿನಲ್ಲಿ ಬಂದಿರುವ ಅನಿವಾಸಿ ಭಾರತೀಯರು ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೇಂದ್ರ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ಇಲಾಖೆಯಿಂದ ಜಂಟಿ ತನಿಖೆ ಆರಂಭವಾಗಿದೆ. ಕಳೆದ 15 ದಿನಗಳ ಹಿಂದೆ ಈ ಪ್ರದೇಶದಲ್ಲಿ ಸ್ಯಾಟಲೈಟ್ ಪೋನ್ ಬಳಕೆಯಾಗಿದೆ ಎಂದು ಮೂಲಗಳು ಹೇಳಿವೆ.
ಆರ್ಎಸ್ಎಸ್ ಕಾರ್ಯಾಲಯಗಳಿಗೆ ಪೊಲೀಸ್ ಭದ್ರತೆ
ಕರ್ನಾಟಕದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh – RSS) ಆರ್ಎಸ್ಎಸ್ ಕಾರ್ಯಾಲಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಾಲಯಗಳಿಗೂ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ. ಬೆದರಿಕೆಯ ಸಂದೇಶ ಕಳಿಸಿದ್ದ ವ್ಯಕ್ತಿಯನ್ನು ಸೆಂಥಿಲ್ ಎಂದು ಗುರುತಿಸಲಾಗಿದ್ದು, ಆತನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರು ಹೇಳಿದರು. ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ಎಸ್ಎಸ್ ಕಾರ್ಯಾಲಯಗಳನ್ನು ಧ್ವಂಸಗೊಳಿಸುವುದಾಗಿ ತಮಿಳುನಾಡಿನ ವ್ಯಕ್ತಿಯೊಬ್ಬ ಉತ್ತರ ಪ್ರದೇಶ ನಿವಾಸಿಗೆ ಬೆದರಿಕೆ ಸಂದೇಶ ಕಳಿಸಿದ್ದ.
ಶಂಕಿತ ಉಗ್ರನ ಬಂಧನ, ತನಿಖೆ ಚುರುಕು
ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕನ ಬಂಧನ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದ ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ. ಶಂಕಿತ ಉಗ್ರನಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು, ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ, ಮೊಬೈಲ್ ಫೋನ್ ಪಡೆಯಲು ದಾಖಲೆ ಪತ್ರ ಒದಗಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಒದಗಿಸಿರುವ ಸಹಾಯದ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಶಂಕಿತ ಉಗ್ರನ ಬಂಧನದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಕರ್ನಾಟಕ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.