ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11 ರಿಂದ ಕಾರ್ಯಾರಂಭ: ಎಂಬಿ ಪಾಟೀಲ್
ಹೊಸದಾಗಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವು ಆಗಸ್ಟ್ 11 ರಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ಇದ್ದು, ಜುಲೈ 20 ರೊಳಗೆ ವಿಮಾನ ನಿಲ್ದಾಣದಲ್ಲಿ ಬಾಕಿ ಉಳಿದಿರುವ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಶಿವಮೊಗ್ಗ: ಹೊಸದಾಗಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣವು (Shivamogga Airport) ಆಗಸ್ಟ್ 11 ರಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ಇದ್ದು, ಜುಲೈ 20 ರೊಳಗೆ ವಿಮಾನ ನಿಲ್ದಾಣದಲ್ಲಿ (Airport) ಬಾಕಿ ಉಳಿದಿರುವ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ (MB Patil) ಹೇಳಿದರು. ಜುಲೈ 20 ರೊಳಗೆ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಮತ್ತು ಇತರ ವಾಹನಗಳ ಸೇವೆಗಳನ್ನು ಆರಂಭಿಸಲಾಗುವುದು. ಇದಲ್ಲದೆ ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿಯನ್ನು ನೇಮಿಸಬೇಕಾಗಿದೆ. ಈ ಎಲ್ಲಾ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಜುಲೈ 20 ರೊಳಗೆ ವಿಮಾನ ನಿಲ್ದಾಣವು ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂದು ಹೇಳಿದರು.
ನಾಗರಿಕ ವಿಮಾನಯಾನ ನಿರ್ದೇಶನಾಲಯವು ಈ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ನಡೆಸಲು ಕರ್ನಾಟಕ ರಾಜ್ಯ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (KSIIDC) ಅನುಮತಿ ನೀಡಿದೆ. ಇದರೊಂದಿಗೆ ಶಿವಮೊಗ್ಗ ವಿಮಾನ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಮೊದಲ ವಿಮಾನ ನಿಲ್ದಾಣವಾಗಲಿದೆ ಎಂದು ಸಚಿವರು ಹೇಳಿದರು.
ಎಲ್ಲವೂ ಅಂದುಕೊಂಡಂತೆ ನಡೆದರೆ, ಆಗಸ್ಟ್ 11 ರಂದು ಬೆಂಗಳೂರಿನಿಂದ ಮೊದಲ ವಿಮಾನವು ಶಿವಮೊಗ್ಗಕ್ಕೆ ಇಳಿಯಲಿದೆ. ಅಂದು ನಡೆದ ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಎಲ್ಲರನ್ನು ಆಹ್ವಾನಿಸಲಾಗುವುದು ಎಂದರು.
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ, ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಂತರ ನೈಟ್ ಲ್ಯಾಂಡಿಂಗ್ ಸೌಲಭ್ಯವನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮೂಲ ಯೋಜನೆಯಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯ ಇರಲಿಲ್ಲ. ಇಲ್ಲಿಯವರೆಗೆ ಸುಮಾರು 350 ರೂ. ಕೋಟಿ ಖರ್ಚು ಮಾಡಲಾಗಿದ್ದು, ರಾತ್ರಿ ಲ್ಯಾಂಡಿಂಗ್ ಸೌಲಭ್ಯವನ್ನು ಅಳವಡಿಸಲು ಹೆಚ್ಚಿಗೆ 12 ಕೋಟಿ ರೂ. ಅಗತ್ಯವಿದೆ. ರನ್‌ವೇ ಕಾಮಗಾರಿ ಪೂರ್ಣಗೊಂಡಿದ್ದು, ಮೂರು ತಿಂಗಳಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಏಕಕಾಲದಲ್ಲಿ ಉಪಕರಣಗಳ ಅಳವಡಿಕೆಯ ಬಗ್ಗೆ ಕಾಳಜಿ ವಹಿಸಲಾಗುವುದು ಎಂದು ಹೇಳಿದ್ದಾರೆ.
ಸಚಿವರು ಹಾಸನ, ರಾಯಚೂರು ಮತ್ತು ಕಾರವಾರದಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ನಂತರ, ಇತ್ತೀಚಿನ ರಾಜ್ಯ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನ ಏರ್‌ಸ್ಟ್ರಿಪ್‌ಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:32 am, Fri, 14 July 23