
ಶಿವಮೊಗ್ಗ, ಜುಲೈ 14: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು (Sigandur Bridge) ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ (Sigandur Chowdeshwari Devi) ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.
ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್ ಗಡ್ಕರಿ ಮಾತನಾಡಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.
5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದರು.
ಇದನ್ನೂ ಓದಿ: ನಿಮ್ಮ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ಆಗಬೇಕು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿದ್ದರಾಮಯ್ಯಗೆ 2 ಬಾರಿ ಆಹ್ವಾನಿಸಿದ್ದ ಗಡ್ಕರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿದೆ. ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ಉಳಿದ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.
ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಲು ಸದ್ಯ 40 ನಿಮಿಷ ಸಮಯ ಬೇಕಾಗುತ್ತದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕ ಕೇವಲ 20 ನಿಮಿಷದಲ್ಲಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತಲುಪಬಹುದು. ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:44 pm, Mon, 14 July 25