ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ; ಪರದಾಡುತ್ತಿರುವ ರೋಗಿಗಳು
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ಪರದಾಡುವಂತಾಗಿದೆ.
ಬೆಂಗಳೂರು: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ಪರದಾಡುವಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (Health Department) ಅಡಿಯಲ್ಲಿ ನೋಂದಾಯಿತ ಕಂಪನಿಯಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಔಷಧಿಗಳನ್ನು ಖರೀದಿಸುವ ಮತ್ತು ವಿತರಿಸುವ ನೋಡಲ್ ಏಜೆನ್ಸಿಯಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಟೆಂಡರ್ ಹಿಡಿದಿಡಲು ಸಾಧ್ಯವಾಗಲಿಲ್ಲ. ಇದರಿಂದ ಅಗತ್ಯ ಔಷಧಿಗಳ ಬೇಡಿಕೆಯನ್ನು ಪೂರೈಸುವಲ್ಲಿ ನಿಗಮ ವಿಫಲವಾಗಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಉದ್ಭವಿಸಿದೆ.
ಇದರಿಂದ ರಾಜ್ಯದ 11 ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳ ರೋಗಿಗಳು 500 ರೂ. ಮೊತ್ತದವರೆಗಿನ ಔಷಧಿಗಳನ್ನು ಹೊರಗಡೆ ಖರೀದಿಸುತ್ತಿದ್ದಾರೆ ಎಂದು ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (SAAK) ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಈ ಬಗ್ಗೆ ಕೆಎಸ್ಎಮ್ಎಸ್ಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಸದಾಶಿವ ವಟಾರೆ ಮಾತನಾಡಿ ಔಷಧಿ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದು ನಿಜ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಔಷಧಿ ಪೂರೈಸುವ ಟೆಂಡರ್ ನೀಡುತ್ತದೆ. ಇದೀಗ 15 ದಿನಗಳ ಅಲ್ಪವಧಿಯ ಟೆಂಡರ್ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವಗಳ ಮೇಲೆ ನಡೆಯುತ್ತಿದ್ಯಾ ಹಣ ಮಾಡುವ ದಂಧೆ?
ರಾಜ್ಯ ಸರ್ಕಾರ ಔಷಧಿ ಪೂರೈಸುವ ಟೆಂಡರ್ ಗಳನ್ನು ಇನ್ನು ಇತ್ಯರ್ಥಪಡಿಸದ ಕಾರಣ ಸಮಸ್ಯೆ ಎದುರಾಗಿದೆ. ಇದರಿಂದ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಪಕವಾದ ಔಷಧಿ ಕೊರತೆ ಕಂಡುಬಂದಿದೆ.
ಈ ಬಗ್ಗೆ ಇತ್ತೀಚೆಗೆ ಆರೋಗ್ಯ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾರ್ವಜನಿಕ ಆರೋಗ್ಯಕ್ಕೆ ಯಾವುದೇ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ