
ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount) ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಈ ಗೆಲುವು ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಂದ ಗೆಲುವು. ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ ಎಂದು ಹೇಳಿದ್ದಾರೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿರುವ ಅವರು, ಶೃಂಗೇರಿಯ ಮತದಾರರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರು ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ಕಾನೂನು ಹೋರಾಟದ ನಂತರ, ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ಅಂಚೆ ಮತಗಳ ಮರು ಎಣಿಕೆಗೆ ಐತಿಹಾಸಿಕ ಆದೇಶ ನೀಡಿತ್ತು.
ಇದನ್ನೂ ಓದಿ ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು?
ನಿನ್ನೆ (ಮೇ 2) ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅಂಚೆ ಮತಗಳ ಮರು ಎಣಿಕೆ ನಡೆಯಿತು. ವರದಿಗಳ ಪ್ರಕಾರ, ಮರು ಎಣಿಕೆಯ ನಂತರ ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಬಿಜೆಪಿಯ ಜೀವರಾಜ್ ಅವರಿಗೆ ಮುನ್ನಡೆ ಸಿಕ್ಕಿದೆ ಎನ್ನಲಾಗಿದೆ. ಈ ಬೆಳವಣಿಗೆಯು ಪ್ರಜಾಪ್ರಭುತ್ವದಲ್ಲಿ ಸತ್ಯ ಯಾವತ್ತೂ ಸೋಲದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ವರದಿ: ಅನಿಲ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ