ಬಿಜೆಪಿ-ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ: ಕೋರ್ಟ್ ಆದೇಶದ ಬಳಿಕ ಸಿಎಂ ಮೊದಲ ಮಾತು
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆದೇಶವನ್ನು ಎತ್ತಿ ಹಿಡಿದಿದೆ. ಇನ್ನು ಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮ್ಯಯ ಮೊಲದ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ, ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಸೆಪ್ಟೆಂಬರ್ 24): ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು ಹೈಕೋರ್ಟ್ ಹೇಳಿದೆ. ಇನ್ನು ಈ ಸಂಬಂಧ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ: ಹೈಕೋರ್ಟ್ ತೀರ್ಪು ಬಂದಾಯ್ತು, ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಇಲ್ಲಿದೆ ವಿವರ
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದು ಮೋದಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುವೆ. ಈ ಕಾರಣಕ್ಕಾಗಿ ನನ್ನ ವಿರುದ್ಧ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದು ಕಿಡಿಕಾರಿದ್ದಾರೆ.
ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.
ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂದು ಗುಡಿಗಿದ್ದಾರೆ.
ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ ಎಂದರು.
ಇದನ್ನೂ ಓದಿ: ಹೈಕೋರ್ಟ್ ತೀರ್ಪು ಬಳಿಕ ಸಿಎಂ ಟೆನ್ಷನ್: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ
ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ