ಫೇಕ್ ನ್ಯೂಸ್‌ ಮೂಲ ಪತ್ತೆ ಮಾಡಲು ಸಿಎಂ ಖಡಕ್ ಸೂಚನೆ: ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ ಎಚ್ಚರ

|

Updated on: Jun 20, 2023 | 2:40 PM

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಪ್ರಕಟಣಗಳು ಹೆಚ್ಚಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೇ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ಫೇಕ್ ನ್ಯೂಸ್‌ ಮೂಲ ಪತ್ತೆ ಮಾಡಲು ಸಿಎಂ ಖಡಕ್ ಸೂಚನೆ: ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ ಎಚ್ಚರ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ (Fake News) ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು (ಜೂನ್ 20) ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ಸಿಎಂ ವಿವರವಾಗಿ ಚರ್ಚಿಸಿದ್ದಾರೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿ ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕ್

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ (Fact Check) ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಸುದ್ದಿ ಪೋಸ್ಟ್ ಮಾಡುವುದು ಅಥವಾ ಶೇರ್​ ಮಾಡುವವರು ಕೊಂಚ ಎಚ್ಚರಿಂದ ಇರುವುದು ಒಳಿತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:39 pm, Tue, 20 June 23