ಬೆಂಗಳೂರು, (ಜುಲೈ 08): ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 26ರಂದು ಸಂವಿಧಾನ ದಿನಾಚರಣೆ ದಿನದಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್ ಎಚ್.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.
ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.
ಇದನ್ನೂ ಓದಿ: ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಬಾಬಾ ಸಾಹೇಬರ ಭಾವಚಿತ್ರ ಕಡ್ಡಾಯ
ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.