ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಟ್ವಿಟ್ಟರ್​ನಲ್ಲಿ ಸಿದ್ದರಾಮಯ್ಯ ಕಿಡಿ

| Updated By: sandhya thejappa

Updated on: Jul 13, 2021 | 12:11 PM

2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವ ಜನರಿಗೆ ಅನ್ಯಾಯವೆಸಗಿದೆ.

ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಟ್ವಿಟ್ಟರ್​ನಲ್ಲಿ ಸಿದ್ದರಾಮಯ್ಯ ಕಿಡಿ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್​ನಲ್ಲಿ ಕಿಡಿ ಕಾರಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಅಂತ ಒತ್ತಾಯಿಸಿದ್ದಾರೆ.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3,000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡ ಯುವ ಜನತೆ ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವ ಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನ ಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ, ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್​ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ ಮತ್ತು ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನ ಮಂತ್ರಿಯವರ ಗಮನಕ್ಕೆ ತಂದು ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ

ಮೇಕೆದಾಟು ಡ್ಯಾಂ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವ ನಂಬಿಕೆ ಇದೆ; ಡಿ.ಕೆ.ಶಿವಕುಮಾರ್ ಟ್ವೀಟ್

ಅಯೋಧ್ಯೆ ಅಭಿವೃದ್ಧಿಯ ಮಹತ್ವಕಾಂಕ್ಷಿ ಯೋಜನೆಗಳನ್ನು ಪ್ರಧಾನಿ ಮೋದಿಯವರ ಎದುರು ಪ್ರಸ್ತುತ ಪಡಿಸಿದ ಉತ್ತರ ಪ್ರದೇಶ ಸರ್ಕಾರ

(Siddaramaiah has urged government to allow the banking test to be written in Kannada)

Published On - 11:46 am, Tue, 13 July 21