ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕಾಂಕ್ಷಿ ಹೌದಾದರೂ ನಮ್ಮಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಆಡಳಿತ ಮಾಡುವುದಾಗಿ ಸ್ಪಷ್ಟಪಡಿಸಿದರು.

ನವದೆಹಲಿ, ಜುಲೈ 10: ಕರ್ನಾಟಕ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಆಡಳಿತ ನಡೆಸಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮುನ್ನೆಲೆಯಲ್ಲಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಿದ್ದು, ಇಂದು ಸಂಜೆ ರಾಹುಲ್ ಗಾಂಧಿಯವರನ್ನು (Rahul Gandhi) ಭೇಟಿಯಾಗಲಿದ್ದಾರೆ. ಅದಕ್ಕೂ ಮುನ್ನ ಸಿದ್ದರಾಮಯ್ಯ ಈ ಹೇಳಿಕೆ ನೀಡಿರುವುದು ಮಹತ್ವದ ಪಡೆದಿದೆ. ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದರು.
ಡಿಕೆ ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಹೌದು. ಆದರೆ ನಾನೇ 5 ವರ್ಷ ಅಧಿಕಾರ ಪೂರೈಸುವೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಹೈಕಮಾಂಡ್ ಸೂಚನೆ ನಾನೂ ಪಾಲಿಸುವೆ, ಡಿಕೆಶಿಯೂ ಪಾಲಿಸಬೇಕು: ಸಿದ್ದರಾಮಯ್ಯ
ಕೆಲವು ಮಂದಿ ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅದು ನಿಜ. ಕೆಲವು ಮಂದಿ ಶಾಸಕರು ಅಭಿಪ್ರಾಯ ಡಿಕೆ ಶಿವಕುಮಾರ್ ಪರ ಬೆಂಬಲ ಸೂಚಿಸಿದ್ದಾರೆ. ಆದರೆ, ಅದು ಕೆಲವೇ ಕೆಲವು ಸಂಖ್ಯೆಯಲ್ಲಿ. ಹಾಗೆಂದು ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನೂ ಅದಕ್ಕೆ ಬದ್ಧನಾಗಿರಬೇಕು, ಡಿಕೆ ಶಿವಕುಮಾರ್ ಅವರೂ ಅಷ್ಟೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮಾತುಕತೆ ವೇಳೆ ಎರಡೂವರೆ ವರ್ಷದಲ್ಲಿ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ‘‘ಇಲ್ಲ’’ ಎಂದರು.
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಬಗ್ಗೆ ಹೈಕಮಾಂಡ್ ಸುಳಿವು ನೀಡಿಲ್ಲ: ಸಿದ್ದರಾಮಯ್ಯ
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಅಥವಾ ಅಧಿಕಾರ ಹಸ್ತಾಂತರ ವಿಚಾರವಾಗಿ ಹೈಕಮಾಂಡ್ ಆಗಲೀ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಲೀ ಯಾವುದೇ ಸುಳಿವು ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ
ರಣದೀಪ್ ಸುರ್ಜೇವಾಲ ಶಾಸಕರ ಜತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹೇಗಾಗುತ್ತಿದೆ ಎಂದು ವಿವರ ತಿಳಿದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಹಣವಿಲ್ಲದಾಗಿಲ್ಲ. ಸರ್ಕಾರ ದಿವಾಳಿಯಾಗುತ್ತಿದೆ ಎಂಬ ಆರೋಪಗಳಿಗೆ ಆಧಾರವಿಲ್ಲ ಎಂದರು. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ವಾದದಲ್ಲಿ ಹುರುಳಿಲ್ಲ ಎಂದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Thu, 10 July 25