AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್​ನಲ್ಲಿ ಕೆಎಂಎಫ್​​ ವಿಲೀನ ವಿಚಾರ: ಪ್ರಧಾನಿ ಮೋದಿ, ಅಮಿತ್​ ಶಾ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ...!! ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಅಮುಲ್​ನಲ್ಲಿ ಕೆಎಂಎಫ್​​ ವಿಲೀನ ವಿಚಾರ: ಪ್ರಧಾನಿ ಮೋದಿ, ಅಮಿತ್​ ಶಾ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ವಿಪಕ್ಷನಾಯಕ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:Apr 07, 2023 | 1:31 PM

Share

ಬೆಂಗಳೂರು: ಅಮುಲ್​ನಲ್ಲಿ (Amul), ಕೆಎಂಎಫ್ (KMF) ​​ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಚುನಾವಣೆ ಹೊತ್ತಿಲಿನಲ್ಲಿ ಪ್ರತಿರೋಧದ ದಾಳವಾಗಿ ಬಳಸಿಕೊಳ್ಳುತ್ತವೆ. ಹೌದು ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah) ಟ್ವೀಟ್​ ಮಾಡಿ ರಾಜ್ಯ ಸರ್ಕಾರ (Karnataka Government), ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ (Amith Shah) ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್​ ಮಾಡಿದ್ದಾರೆ.

“ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್​ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೈತಪ್ಪಿದ ಟಿಕೆಟ್​: ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

“ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್​ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದರು.”

“ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ರಾಜ್ಯ ಬಿಜೆಪಿ ಘಟಕ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ಹ್ಯಾಷ್​​ಟ್ಯಾಗ್​ ಸೇವ್​ ನಂದಿನಿ ಅಡಿಯಲ್ಲಿ ಟ್ವೀಟ್​ ಮಾಡಿದ್ದಾರೆ. “ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್​​ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?” ಎಂದು ರಾಜ್ಯ ಬಿಜೆಪಿ ಘಟಕಕ್ಕೆ ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣ ಏನು?”

“ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್​​ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹಸಚಿವರಾದ ಅಮಿತ್​ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು”. ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Fri, 7 April 23