ಖಾಸಗಿ ಶಾಲೆಗಳಲ್ಲಿನ್ನು ನಾಡಗೀತೆ ಹಾಡುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಆದೇಶ

| Updated By: ಗಣಪತಿ ಶರ್ಮ

Updated on: Feb 21, 2024 | 12:19 PM

ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ಹಲವು ತರಾತುರಿಯ ನಿರ್ಧಾರಗಳನ್ನು ತೆಗೆದುಕೊಂಡು ವಿವಾದಕ್ಕೆ ಸಿಲುಕುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೆ ಎಡವಟ್ಟು ಮಾಡಿಕೊಂಡಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ಇತ್ತೀಚೆಗೆ ಸರ್ಕಾರ ಹೊರಡಿಸಿದ್ದು, ವಿವಾದಕ್ಕೆ ಗ್ರಾಸವಾಗುವ ಸಾಧ್ಯತೆ ಇದೆ.

ಖಾಸಗಿ ಶಾಲೆಗಳಲ್ಲಿನ್ನು ನಾಡಗೀತೆ ಹಾಡುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಆದೇಶ
ವಿಧಾನಸೌಧ
Follow us on

ಬೆಂಗಳೂರು, ಫೆಬ್ರವರಿ 21: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಿ ಆಮೇಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ (Karnataka Government) ಇದೀಗ ಮತ್ತೊಂದು ಅಂಥದ್ದೇ ಕ್ರಮಕ್ಕೆ ಮುಂದಾಗಿದೆ. ಖಾಸಗಿ ಶಾಲೆಗಳಲ್ಲಿ (Private Schools) ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ತಿಳಿದುಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ: ಪ್ರಿಂಟ್​ ಮಿಸ್ಟೇಕ್​ ಎಂದ ಶಿವರಾಜ್​ ತಂಗಡಗಿ

ಖಾಸಗಿ ಶಾಲೆಗಳಲ್ಲಿ ಹಾಡಬಾರದೆಂಬ ನೇರ ಉಲ್ಲೇಖವಿಲ್ಲ!

ಈ ಮೇಲಿನ ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಬದಲಾಯಿಸಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥ ಬರುತ್ತದೆ. ಹಾಗೆಂದು, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿಲ್ಲ ಎಂಬುದೂ ಗಮನಾರ್ಹ.

ಸರ್ಕಾರದ ಆದೇಶದ ಪ್ರತಿ

ಶಿಕ್ಷಣ ಸಂಸ್ಥೆ ಸಂಬಂಧಿತ ವಿವಾದಕ್ಕೆ ಮತ್ತೊಂದು ಸೇರ್ಪಡೆ

ಕಳೆದ ಕೆಲವು ದಿನಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಒಂದಲ್ಲ ಒಂದು ಎಡವಟ್ಟು ಮಾಡಿಕೊಳ್ಳುತ್ತಿದೆ. ಇದೀಗ ನಾಡಗೀತೆ ಸಂಬಂಧಿತ ಸುತ್ತೋಲೆಯೊಂದಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಆರಂಭದಲ್ಲಿ ಸರ್ಕಾರಿ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ಸುತ್ತೋಲೆ ಕಳುಹಿಸಿದ್ದ ರಾಜ್ಯ ಸರ್ಕಾರ, ನಂತರ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅದನ್ನು ಹಿಂಪಡೆದಿತ್ತು. ನಂತರ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಹಾಡಿನ ‘ಕೈಮುಗಿದು ಒಳಗೆ ಬಾ’ ಎಂಬ ಘೋಷಣೆಯನ್ನು ಬದಲಾಯಿಸಿ ‘ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಲು ಆದೇಶ ನೀಡಲಾಗಿತ್ತು. ಇದಕ್ಕೂ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಯೂಟರ್ನ್ ತೆಗೆದುಕೊಂಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Wed, 21 February 24