
ಬೆಂಗಳೂರು, (ಸೆಪ್ಟೆಂಬರ್ 26): ಬಿಬಿಎಂಪಿ (BBMP) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority ) ಅಸ್ತಿತ್ವಕ್ಕೆ ಬಂದಿದ್ದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ (Rahim Khan) ಅವರ ಖಾತೆಯಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (thawar chand gehlot) ಅಧಿಸೂಚನೆ ಹೊರಡಿಸಿದ್ದಾರೆ.
ಈ ಮೊದಲು ಡಿ.ಕೆ.ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ (ನಗರ ಯೋಜನೆಗೆ ಸಂಬಂಧಿಸಿದ ಪ್ರಾಧಿಕಾರಗಳು) ಸೇರಿ ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ನಗರ ಯೋಜನೆಗೆ ಸಂಬಂಧಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ಪಾಲಿಕೆಗಳು ಮತ್ತು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು (ಸೇವಾ ವಿಷಯಗಳನ್ನು ಹೊರತುಪಡಿಸಿ), ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಎಲ್ ಆಡಳಿತ ಹೊಣೆ ನೀಡಲಾಗಿದೆ.
ಇನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರ ಖಾತೆ ಹಾಗೆಯೇ ಉಳಿದಿದ್ದರೂ, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಜವಾಬ್ದಾರಿ ಮಾತ್ರ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ.
ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.