ಶೀಘ್ರದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸ್ತೇವೆ: ಬಾಲಚಂದ್ರ ಜಾರಕಿಹೊಳಿ

| Updated By: ವಿವೇಕ ಬಿರಾದಾರ

Updated on: Oct 31, 2022 | 5:14 PM

ರಾಜ್ಯದ 16ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಗ್ರಾಹಕರಿಗೆ ಹೆಚ್ಚು ಮಾಡಿದ ಹಣವನ್ನ ರೈತರಿಗೆ ಕೊಡಲು ತೀರ್ಮಾನ ಮಾಡಲಾಗಿದೆ.

ಶೀಘ್ರದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸ್ತೇವೆ: ಬಾಲಚಂದ್ರ ಜಾರಕಿಹೊಳಿ
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
Follow us on

ಬೆಳಗಾವಿ: ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದು, ಈಗ ದಿನ ಬಳಕೆ ವಸ್ತು ಹಾಲಿನ ದರವನ್ನೂ ಏರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ನಂದಿನಿ ಹಾಲಿನ (Nandini Milk) ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸ್ತೇವೆ ಎಂದು ಕಿತ್ತೂರು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಹೇಳಿದ್ದಾರೆ. ರಾಜ್ಯದ 16ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಇನ್ನೂ ಗ್ರಾಹಕರಿಗೆ ಹೆಚ್ಚು ಮಾಡಿದ ಹಣವನ್ನ ರೈತರಿಗೆ ಕೊಡಲು ತೀರ್ಮಾನ ಮಾಡಿದ್ದೇವೆ. ಅತೀ ಶೀಘ್ರದಲ್ಲಿ ಮೂರು ರೂಪಾಯಿ ಹಾಲಿನ ದರ ಏರಿಸುತ್ತೇವೆ. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಕೆಎಂಎಫ್

ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿರುವ ಕೆಎಂಎಫ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅನುಮೋದನೆ ಇಲ್ಲದಿದ್ದರೂ ಹಾಲಿನ ಬೆಲೆಯನ್ನು ಒಂದು ಲೀಟರ್​ಗೆ 3 ರೂಪಾಯಿ ಹೆಚ್ಚಿಸಲು ಮುಂದಾಗಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿನಿಂದ ಕೆಎಂಎಫ್‌ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಅಧ್ಯಕ್ಷರು ತಮ್ಮ ಅಧಿಕಾರ ದರ ಏರಿಕೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಟಿವಿ9ಗೆ ಮಾಹಿತಿ ದೊರೆತಿತ್ತು. ಈಗ  ಕೆಎಂಎಫ್ ಅಧ್ಯಕ್ಷರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್‌ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.

ಕೆಎಂಎಫ್ ಜಾರಿಗೊಳಿಸಿರುವ ಹಲವು ಯೋಜನೆಗಳಿಗೆ ಸರ್ಕಾರದ ಆರ್ಥಿಕ ನೆರವು ಇದೆ. ಹೀಗಾಗಿ ಬೆಲೆ ಹೆಚ್ಚಳ ಸೇರಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ರಾಜ್ಯ ಸರ್ಕಾರದ ಅನುಮೋದನೆ ಪಡೆದುಕೊಳ್ಳುತ್ತಿತ್ತು. ಆದರೆ ಈ ಬಾರಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಇರುವ ಅಧಿಕಾರವನ್ನು ಬಳಸಿಕೊಂಡು ದರ ಹೆಚ್ಚಳದ ಆದೇಶ ಮಾಡಬೇಕು ಎಂದು ಒಕ್ಕೂಟಗಳು ಅಧ್ಯಕ್ಷರ ಮೇಲೆ ಒತ್ತಡ ಹೇರಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Mon, 31 October 22