
ಬೆಂಗಳೂರು, (ಜೂನ್ 04): ಕೊನೆಗೂ ಕೇರಳಕ್ಕೆ (Kerala) ಮುಂಗಾರು (Southwest Monsoon) ಪ್ರವೇಶಿಸಿದೆ. ಇಂದು (ಜೂನ್ 04) ಅಧಿಕೃತವಾಗಿ ನೈಋತ್ಯ ಮುಂಗಾರು ಕೇರಳ ಎಂಟ್ರಿಕೊಟ್ಟಿದ್ದು, ಕರ್ನಾಟಕದ (Karnataka) ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಇನ್ನುಳಿಂದಂತೆ ಇಂದಿನಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮುಂಗಾರು ಮಳೆ ವ್ಯಾಪಿಸಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದರಿಂದ ಕರ್ನಾಟಕದಲ್ಲೂ ಮಳೆಗಾಲ ಆರಂಭವಾಗಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್ 4 ರಂದು ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ನಾಳೆಯಿಂದ ಅಂದರೆ ಜೂನ್ 5 ರಿಂದ ಜೂ. 10 ರವರೆಗೆ ಮಳೆಯ ತೀವ್ರತೆ ಗಮನಾರ್ಹವಾಗಿ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 4 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 5 ರಿಂದ ಜೂನ್ 10ರ ವರೆಗೂ ಇಡೀ ಪ್ರದೇಶದಲ್ಲಿ ಅಲ್ಲಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಕೆಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಮುನ್ಸೂಚನೆಯ ಸಂಪೂರ್ಣ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9 ರವರೆಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.