SSLC Exam 2021: ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಹಾಗೂ ಸಿದ್ಧತೆ ಬಗ್ಗೆ ಇಂದು ಬೆಳಗ್ಗೆ 11 ಗಂಟೆಗೆ ಮಹತ್ತರ ಸಭೆ
SSLC Exam 2021 Time Table: ಇಂದು ಬೆಳಗ್ಗೆ 11 ಗಂಟೆಗೆ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿದ್ದು, ಪರೀಕ್ಷಾ ವೇಳಾಪಟ್ಟಿ ಘೋಷಿಸುವ ನಿರೀಕ್ಷೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆಯೊಂದನ್ನು ಹಮ್ಮಿಕೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆಯಲಿರುವ ಸಭೆಯ ನಂತರ ಘೋಷಿಸುವ ಸಾಧ್ಯತೆ ಇದೆ. ಸುರಕ್ಷಿತ ವಾತಾವರಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿ, ಡಿಎಚ್ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿದ್ದು, ಅದರಲ್ಲಿ ಸಚಿವ ಎಸ್.ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವ ನಿರೀಕ್ಷೆಯಿದೆ.
ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ಪರೀಕ್ಷೆ ನಡೆಸಲು ಏನೇನು ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳು ಅವಶ್ಯಕ ಎಂಬಲ್ಲಿಂದ ಅನೇಕ ವಿಚಾರಗಳು ಈ ಮಹತ್ವದ ಸಭೆಯಲ್ಲಿ ಚರ್ಚೆಯಾಗಲಿವೆ. ನಂತರ ಅಧಿಕಾರಿಗಳ ಸಲಹೆ, ಸೂಚನೆಯೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಸದ್ಯದ ಅಂದಾಜಿನ ಪ್ರಕಾರ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಯೋಚನೆ ಇರುವ ಹಿನ್ನೆಲೆ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಎಲ್ಲಾ ತಯಾರಿ ಆರಂಭವಾಗಿದೆ.
ಶಿಕ್ಷಣ ಇಲಾಖೆಯ ತಯಾರಿ ಹೇಗಿದೆ? ಎಸ್ಎಸ್ಎಲ್ಸಿ ಪರೀಕ್ಷೆಗೆಂದೇ ಈಗಾಗಲೇ 6,000 ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಪರೀಕ್ಷಾ ತುರ್ತು ಸಿದ್ಧತೆಯನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆರು ಆಡಿಗೆ ಒಂದರಂತೆ ಆಸನ ವ್ಯವಸ್ಥೆ ಮಾಡಲಾಗುವುತ್ತಿದ್ದು, ಕೊಠಡಿಯಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಜತೆಗೆ, ಸಿಸಿಟಿವಿ ಕ್ಯಾಮರಾ ಅಳವಡಿಕೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳ ಸಿದ್ಧತೆ ನಡೆಯುತ್ತಿದೆ. ತುರ್ತಾಗಿ ಪರೀಕ್ಷಾ ಕೇಂದ್ರಗಳ ರಚನೆ ಮಾಡಿ ಮಾಹಿತಿ ನೀಡುವಂತೆ ರಾಜ್ಯದ ಎಲ್ಲ ನೋಡಲ್ ಅಧಿಕಾರಿಗಳು, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ ಕಳೆದಸಲಕ್ಕಿಂತ ಹೆಚ್ಚಿನ ಶಿಕ್ಷಕರ ಅವಶ್ಯಕತೆ ಇದೆ. ಹೀಗಾಗಿ ಕೊವಿಡ್ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಹಾಗು ಸಿಬ್ಬಂದಿ ವರ್ಗವನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: SSLC Exam 2021: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾರ್ಗಸೂಚಿ ಬಿಡುಗಡೆ: ವಿವರ ಇಲ್ಲಿದೆ