ಮೈಸೂರು: ಪರೀಕ್ಷೆ (Exam) ಬರೆಯುವ ಸಂದರ್ಭದಲ್ಲಿ ಕುಸಿದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಘಟನೆ ಸಂಭವಿಸಿದ್ದು, ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಆಸ್ಪತ್ರೆಗೆ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಭೇಟಿ ನೀಡಿದ್ದಾರೆ. ಆರೋಗ್ಯಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದು ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತ ಕ್ರಮವನ್ನು ಕೈಗೊಳ್ಳಲಾಗಿತ್ತು. ಕೋವಿಡ್ ಪರೀಕ್ಷೆ ಹಾಗೂ ವಿದ್ಯಾರ್ಥಿಗಳಿಗೆ ತಾಪಮಾನ ಪರೀಕ್ಷೆ ಎಲ್ಲವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸಿದ್ದರು. ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಂತರ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತದೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಸೋಮವಾರದಿಂದ (ಮಾರ್ಚ್ 28) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳ ಪೈಕಿ 4,52,732 ಬಾಲಕರು ಮತ್ತು 4,21,110 ಮಂದಿ ಬಾಲಕಿಯರು. ಪರೀಕ್ಷೆಗೆ 15,387 ಶಾಲೆಗಳು ನೋಂದಾಯಿಸಿಕೊಂಡಿದ್ದು, 3,444 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಸೆಕ್ಷನ್ ಅನ್ವಯ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಸಂಚರಿಸಬಹುದು.
ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಮತಿ ನೀಡಲ್ಲ ಅಂತ ಸರ್ಕಾರ ಈಗಾಗಲೇ ತಿಳಿಸಿದೆ. ಹೀಗಿದ್ದೂ, ರಾಜಾಜಿನಗರದ ಕೆಟಿಎಸ್ವಿ ಹೈಸ್ಕೂಲ್ ಶಿಕ್ಷಕಿ ಪರೀಕ್ಷಾ ಕೊಠಡಿಗೆ ಹಿಜಾಬ್ ಧರಿಸಿ ಬಂದಿದ್ದರು. ಹೀಗೆ ಹಿಜಾಬ್ ಧರಿಸಿ ಬಂದ ಪರೀಕ್ಷಾ ಮೇಲ್ವಿಚಾರಕಿ ಫಾತಿಮಾ ಅವರನ್ನು ಅಮಾನತು ಮಾಡಲಾಗಿದೆ. ಪರೀಕ್ಷಾ ಕೆಲಸದಿಂದ ಮುಖ್ಯ ಅಧೀಕ್ಷಕರು ವಜಾಗೊಳಿಸಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶ ನೀಡುವುದಿಲ್ಲ. ಆಯಾ ಶಾಲೆಗಳ ಆಡಳಿತ ಮಂಡಳಿ ನಿಗದಿಪಡಿಸಿರುವ ಶಾಲಾ ಸಮವಸ್ತ್ರ ಪಾಲನೆಯು ಖಾಸಗಿ ಶಾಲೆಗಳ ಮಕ್ಕಳಿಗೂ ಕಡ್ಡಾಯ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗುವುದು. ನಿಯಮ 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹಲವು ಮುಸ್ಲಿಂ ಧರ್ಮಗುರುಗಳು ಸಹ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:
Pramod Sawant: ಎರಡನೇ ಬಾರಿ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ
Published On - 1:14 pm, Mon, 28 March 22