AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ: ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ

ಕಬ್ಬು ಬೆಳೆಗಾರರ ನಿರಂತರ 9 ದಿನಗಳ ಹೋರಾಟ ಕೊನೆಗೂ ಫಲ ನೀಡಿದೆ. ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ. ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇತ್ತ ಸರ್ಕಾರ ಕಬ್ಬಿಗೆ ದರ ನಿಗದಿ ಮಾಡುತ್ತಿದ್ದಂತೆ, ಅತ್ತ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಕುಣಿದು ಕುಪ್ಪಳಿಸಿದ್ದಾರೆ.

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ: ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ
Anil Kalkere
| Edited By: |

Updated on:Nov 07, 2025 | 7:07 PM

Share

ಬೆಂಗಳೂರು, ನವೆಂಬರ್​ 07: ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ (Sugarcane farmers Protest) ಮಾಡಿದ್ದರು. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಾಲು ಸಾಲು ಸಭೆ ಬೆನ್ನಲ್ಲೇ ಇದೀಗ ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ. ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಕಬ್ಬು ಬೆಳೆಗಾರರ ನಿರಂತರ  ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು 

ವಿಧಾನಸೌಧದಲ್ಲಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಟನ್ ಕಬ್ಬಿಗೆ 3200 ರೂ. ದರ ನಿಗದಿ ಮಾಡಲಾಗಿದ್ದು, ಜೊತೆಗೆ 100 ರೂ. ಸೇರಿಸಿ ಕೊಡುತ್ತೇವೆ. ಅಂದರೆ ಸರ್ಕಾರದಿಂದ 50 ರೂ., ಕಾರ್ಖಾನೆಯಿಂದ 50 ರೂ. ನೀಡಲಾಗುತ್ತೆ. ಇದಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಕಬ್ಬು ಕಾರ್ಖಾನೆ ಮಾಲೀಕರು, ಸರ್ಕಾರದಿಂದ ಫಿಪ್ಟಿ ಫಿಪ್ಟಿ: ಸಭೆಯಲ್ಲಿ ಮಹತ್ವದ ನಿರ್ಧಾರ

ಶೇ.11.25ರಷ್ಟು ರಿಕವರಿ ಇದ್ದರೆ ಟನ್‌ಗೆ 3250 ರೂ. ಮಾಲೀಕರು ನೀಡಬೇಕು. ಇದಕ್ಕೆ ಸರ್ಕಾರದಿಂದ 50 ರೂ. ಹೆಚ್ಚುವರಿಯಾಗಿ ಪಾವತಿಸಲು ತೀರ್ಮಾನಿಸಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ. ರಿಕವರಿ ಕಡಿಮೆಯಾದರೆ ದರ ಸಹ ವ್ಯತ್ಯಾಸವಾಗಲಿದೆ. ಶೇ.10.25ರಷ್ಟು ರಿಕವರಿ ಇದ್ದರೆ ಟನ್‌ಗೆ 3200 ರೂ. ದರ ನಿಗದಿಪಡಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ

  • ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್‌ಆರ್‌ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.
  • ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್‌ಆರ್‌ಪಿ ನಿಗದಿಪಡಿಸಿದೆ. ಈ ಎಫ್‌ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್‌ಪಿ ಹೆಚ್ಚಳ ಮಾಡಿಲ್ಲ.
  • ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಮಧ್ಯೆ ನುಸುಳಿ ಬಂದು ಕಿಡಿಗೇಡಿಗಳಿಂದ ಕಲ್ಲು ತೂರಾಟ: ಡಿವೈಎಸ್ಪಿ ಕೈ ಮುರಿತ, 4 KSRTC ಬಸ್​ ಗಾಜು ಪುಡಿ ಪುಡಿ

  • ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಲಾಗಿದೆ.
  • ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.
  • ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್​ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.
  • ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:53 pm, Fri, 7 November 25