
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ನಾಳೆ ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಅಲ್ಲದೆ, ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಷ್ಟ ಅನ್ನುವ ಪರಿಸ್ಥಿತಿ ರಾಜ್ಯ ಕಬ್ಬು ಬೆಳೆಗಾರರದ್ದಾಗಿದೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ನಾಳೆ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ನಾಳೆ ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ರಾಜ್ಯದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಬಂದ್ ಮಾಡಲಾಗುವುದು ಎಂದು ತೀರ್ಮಾನ ಮಾಡಲಾಗಿದೆ. ಈಗಾಗಲೇ ಧಾರವಾಡ, ಬಿಜಾಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ರಸ್ತೆ ತಡೆ ಮಾಡಲು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ನಾಳೆ ಬೆಳಿಗ್ಗೆ ಮತ್ತಷ್ಟು ಜಿಲ್ಲೆಗಳಲ್ಲಿ ಹೆದ್ದಾರಿ ತಡೆಯಲಾಗುತ್ತದೆ. ಪ್ರಯಾಣಿಕರು ಜನಸಾಮಾನ್ಯರು ರೈತರ ಹಿತದೃಷ್ಟಿಯಿಂದ ಸಹಕಾರ ಕೊಡಬೇಕು ಎಂದು ಮನವಿ ಮಾಡಿಕೊಂಡರು.
ಹಲವಾರು ಬಾರಿ ಪ್ರತಿಭಟನೆ ಮಾಡಿ ಮನವಿ ನೀಡಿದ್ದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಈ ತಿಂಗಳ 31 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:24 am, Wed, 26 October 22