ಸುಪ್ರೀಂಕೋರ್ಟ್ ಮಹತ್ವದ ತೀರ್ಪು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್
ಕರ್ನಾಟಕದಲ್ಲಿ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿಹಿಡಿದು ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಇದರೊಂದಿಗೆ ಸುಪ್ರೀಂಕೋರ್ಟ್ ತೀರ್ಪಿನಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು, (ನವೆಂಬರ್ 20): ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಈ ಮೂಲಕ ಜನವರಿ 2026ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದಲ್ಲಿ ಓಲಾ, ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಅವಕಾಶ ನೀಡಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ.ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಇಂದು (ನವೆಂಬರ್ 20) ಆದೇಶ ಹೊರಡಿಸಿದೆ.
2026ರ ಜನರಿಯಲ್ಲಿ ಕರ್ನಾಟಕ ಹೈಕೋರ್ಟ್ ಬ್ಯಾಕ್ ಟ್ಯಾಕ್ಸಿ ಸೇವೆಗೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್, ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು, ಕಾನೂನುಬದ್ಧವಾಗಿ ನಿಯಂತ್ರಿಸಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಮೋಟಾರು ವಾಹನ ಕಾಯ್ದೆಯಡಿ ದ್ವಿಚಕ್ರ ವಾಹನಗಳು ಸಾರಿಗೆ ವಾಹನಗಳಾಗಿ ಕಾರ್ಯನಿರ್ವಹಿಸಲು ಅರ್ಹವಾಗಿವೆ ಎಂದು ಅಭಿಪ್ರಾಯಪಟ್ಟಿದೆ.
ಹಲವು ಕಾರಣಗಳೊಂದಿಗೆ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ಸರ್ಕಾರ
ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಪ್ರಯಾಣಕ್ಕೆ ನಾಂದಿ ಹಾಡುವುದಲ್ಲದೆ, ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತವೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಲಾಗಿತ್ತು. ಅದಾದ ನಂತರ ಎಲೆಕ್ಟ್ರಿಕ್ ಬೈಕ್‌ಗಳ ಮೂಲಕ ಟ್ಯಾಕ್ಸಿ ಸೇವೆ ನೀಡುವವರಿಂದ ಪ್ರಯಾಣಿಕರ ಮೇಲೆ ಅದರಲ್ಲೂ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚುವಂತಾಗಿತ್ತು. ಇದನ್ನೂ ಒಂದು ಕಾರಣವಾಗಿಟ್ಟುಕೊಂಡು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮವನ್ನೇ ರದ್ದು ಮಾಡಲಾಯಿತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಹೆಚ್ಚುವ ಸಾಧ್ಯತೆಗಳಿರುತ್ತವೆ. ಅಲ್ಲದೆ, ಕೆಲ ಬೈಕ್‌ಗಳಲ್ಲಿ ವಿಮೆ ಇಲ್ಲದಿದ್ದರೂ ಸೇವೆ ನೀಡುವುದರಿಂದ ಅಪಘಾತದ ಸಂದರ್ಭದಲ್ಲಿ ವಿಮಾ ಮೊತ್ತ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರಿಂದ ಬೈಕ್ ಟ್ಯಾಕ್ಸಿ ಚಾಲಕರಿಗಿಂತ ಪ್ರಯಾಣಿಕರಿಗೆ ಹೆಚ್ಚಿನ ಸಮಸ್ಯೆಯಾಗುತ್ತದೆ. ಹೀಗೆ ಹತ್ತು ಹಲವು ಕಾರಣಗಳೊಂದಿಗೆ ರಾಜ್ಯ ಸರ್ಕಾರ, ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿತ್ತು.
Published On - 2:26 pm, Fri, 20 November 26




