ಸುಪ್ರೀಂಕೋರ್ಟ್​ ಮಹತ್ವದ ತೀರ್ಪು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್

ಕರ್ನಾಟಕದಲ್ಲಿ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರಿಂಕೋರ್ಟ್​ ಎತ್ತಿಹಿಡಿದು ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಇದರೊಂದಿಗೆ ಸುಪ್ರೀಂಕೋರ್ಟ್​ ತೀರ್ಪಿನಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಸುಪ್ರೀಂಕೋರ್ಟ್​  ಮಹತ್ವದ ತೀರ್ಪು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್
Bike Taxi

Updated on: Nov 20, 2026 | 2:46 PM

ಬೆಂಗಳೂರು, (ನವೆಂಬರ್ 20): ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಈ ಮೂಲಕ ಜನವರಿ 2026ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದಲ್ಲಿ ಓಲಾ, ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಅವಕಾಶ ನೀಡಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ.ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಇಂದು (ನವೆಂಬರ್ 20) ಆದೇಶ ಹೊರಡಿಸಿದೆ.

2026ರ ಜನರಿಯಲ್ಲಿ ಕರ್ನಾಟಕ ಹೈಕೋರ್ಟ್​ ಬ್ಯಾಕ್ ಟ್ಯಾಕ್ಸಿ ಸೇವೆಗೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್, ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು, ಕಾನೂನುಬದ್ಧವಾಗಿ ನಿಯಂತ್ರಿಸಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಮೋಟಾರು ವಾಹನ ಕಾಯ್ದೆಯಡಿ ದ್ವಿಚಕ್ರ ವಾಹನಗಳು ಸಾರಿಗೆ ವಾಹನಗಳಾಗಿ ಕಾರ್ಯನಿರ್ವಹಿಸಲು ಅರ್ಹವಾಗಿವೆ ಎಂದು ಅಭಿಪ್ರಾಯಪಟ್ಟಿದೆ.

Loading...

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗೆ ಮತ್ತೆ ಕಂಟಕ: ಸುರಕ್ಷಿತವಲ್ಲ, ಕಾನೂನು ಬಾಹಿರವೆಂದು ಹೈಕೋರ್ಟ್​ಗೆ ಹೈಪವರ್ ಕಮಿಟಿ ವರದಿ

ಸುಪ್ರೀಂ ಕೋರ್ಟ್‌ನ ಈ ಆದೇಶದಿಂದ ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳಿಗೆ ರಿಲೀಫ್ ಸಿಕ್ಕಂತಾಗಿದ್ದು, ರಾಜ್ಯ ಸರ್ಕಾರ ಮತ್ತು ಆಟೋ-ಕ್ಯಾಬ್‌ ಸಂಘಟನೆಗಳಿಗೆ ತೀವ್ರ ಹಿನ್ನಡೆಯಾಗಿದೆ.

ಹಲವು ಕಾರಣಗಳೊಂದಿಗೆ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ಸರ್ಕಾರ

ಬೈಕ್‌ ಟ್ಯಾಕ್ಸಿಗಳು ಅಸುರಕ್ಷಿತ ಪ್ರಯಾಣಕ್ಕೆ ನಾಂದಿ ಹಾಡುವುದಲ್ಲದೆ, ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತವೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ನಿಯಮ ರೂಪಿಸಲಾಗಿತ್ತು. ಅದಾದ ನಂತರ ಎಲೆಕ್ಟ್ರಿಕ್‌ ಬೈಕ್‌ಗಳ ಮೂಲಕ ಟ್ಯಾಕ್ಸಿ ಸೇವೆ ನೀಡುವವರಿಂದ ಪ್ರಯಾಣಿಕರ ಮೇಲೆ ಅದರಲ್ಲೂ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚುವಂತಾಗಿತ್ತು. ಇದನ್ನೂ ಒಂದು ಕಾರಣವಾಗಿಟ್ಟುಕೊಂಡು ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ನಿಯಮವನ್ನೇ ರದ್ದು ಮಾಡಲಾಯಿತು. ಈಗಲೂ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಹೆಚ್ಚುವ ಸಾಧ್ಯತೆಗಳಿರುತ್ತವೆ. ಅಲ್ಲದೆ, ಕೆಲ ಬೈಕ್‌ಗಳಲ್ಲಿ ವಿಮೆ ಇಲ್ಲದಿದ್ದರೂ ಸೇವೆ ನೀಡುವುದರಿಂದ ಅಪಘಾತದ ಸಂದರ್ಭದಲ್ಲಿ ವಿಮಾ ಮೊತ್ತ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರಿಂದ ಬೈಕ್‌ ಟ್ಯಾಕ್ಸಿ ಚಾಲಕರಿಗಿಂತ ಪ್ರಯಾಣಿಕರಿಗೆ ಹೆಚ್ಚಿನ ಸಮಸ್ಯೆಯಾಗುತ್ತದೆ. ಹೀಗೆ ಹತ್ತು ಹಲವು ಕಾರಣಗಳೊಂದಿಗೆ ರಾಜ್ಯ ಸರ್ಕಾರ, ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿತ್ತು.

ರಾಜ್ಯ ಸರ್ಕಾರದ ನಿಷೇಧವನ್ನು ತೆರವುಗೊಳಿಸಿದ್ದ ಹೈಕೋರ್ಟ್​

ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ ನ್ಯಾಯಾಲಯದ ನಿಷೇಧವನ್ನು ತೆರವುಗೊಳಿಸಿತ್ತು. ಕರ್ನಾಟಕ ಸರ್ಕಾರ ನಿಯಂತ್ರಣ ನೀತಿಯನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ನೀಡಿದ್ದ ಈ ಹಿಂದಿನ ಆದೇಶವನ್ನು ಪ್ರಶ್ನಿಸಿ ಓಲಾ, ಉಬರ್ ಮತ್ತು ರಾಪಿಡೊ ಸೇರಿದಂತೆ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ಪೀಠವು ಪುರಸ್ಕರಿಸಿತ್ತು.

ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡುವ ನೀತಿಯನ್ನು ಜಾರಿಗೆ ತರುವವರೆಗೆ ಅವುಗಳ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಓಲಾ, ಉಬರ್, ರಾಪಿಡೊ, ದ್ವಿಚಕ್ರ ವಾಹನ ಮಾಲೀಕರು ಮತ್ತು ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು ಮೇಲ್ಮನವಿ ಸಲ್ಲಿಸಿದ್ದವು. ಈ ಮೇಲ್ಮನವಿಗಳನ್ನು ಪುರಸ್ಕರಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು, ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬಹುದು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ (ಗುತ್ತಿಗೆ ವಾಹನ) ಕಾರ್ಯನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟಿತ್ತು. ರಾಜ್ಯ ಸರ್ಕಾರವು ನಿಯಂತ್ರಣ ಷರತ್ತುಗಳನ್ನು ವಿಧಿಸಬಹುದೇ ಹೊರತು, ಕೇವಲ ಮೋಟಾರ್ ಸೈಕಲ್ ಎಂಬ ಕಾರಣಕ್ಕೆ ಪರವಾನಗಿ ನಿರಾಕರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Fri, 20 November 26

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us