ಮುಸ್ಲಿಂ ಮೀಸಲಾತಿ ರದ್ದತಿಗೆ ತಡೆ; ಮಧ್ಯಂತರ ಆದೇಶ ವಿಸ್ತರಿಸಿದ ಸುಪ್ರೀಂ ಕೋರ್ಟ್
ಮುಸ್ಲಿಮರ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿ ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರದ ಅನುಷ್ಠಾನಕ್ಕೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಣೆ ಮಾಡಿದೆ.

ನವದೆಹಲಿ: ಮುಸ್ಲಿಮರ ಶೇ 4ರ ಮೀಸಲಾತಿಯನ್ನು (Muslim Reservation) ರದ್ದುಗೊಳಿಸಿ ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರದ ಅನುಷ್ಠಾನಕ್ಕೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಿಸ್ತರಣೆ ಮಾಡಿದೆ. ಮುಂದಿನ ಆದೇಶದ ವರೆಗೂ ತಡೆಯಾಜ್ಞೆ ಜಾರಿಯಲ್ಲಿರಲಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಇದರೊಂದಿಗೆ, ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ ಮುನ್ನಾ ದಿನವೇ ನೂತನ ಮೀಸಲಾತಿ ನೀತಿ ಅನುಷ್ಠಾನಕ್ಕೆ ಅಡ್ಡಿಯಾದಂತಾಗಿದೆ. ಮುಸ್ಲಿಮರ ಮೀಸಲಾತಿ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆಎಂ ಜೋಸೆಫ್, ಬಿವಿ ನಾಗರತ್ನ ಹಾಗೂ ಅಸನುದ್ದೀನ್ ಅಮಾನುಲ್ಲಾಜ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಹಂಚಿಕೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು. ಇದರಿಂದ ಒಕ್ಕಲಿಗರ ಮೀಸಲಾತಿ ಪ್ರಮಾಣ ಶೇ 6ಕ್ಕೂ ಲಿಂಗಾಯತರ ಮೀಸಲಾತಿ ಪ್ರಮಾಣ ಶೇ 7ಕ್ಕೂ ಹೆಚ್ಚಳವಾಗಲಿದೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಲ್ಲಿ ವಾದ ಮಂಡಿಸಬೇಕಿರುವುದರಿಂದ ವ್ಯಸ್ತರಾಗಿದ್ದು, ಸಮಯಾವಕಾಶ ಬೇಕಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಹಿರಿಯ ವಕೀಲ ಮುಕುಲ್ ರೋಹ್ಟಗಿ ಮನವಿ ಮಾಡಿದ ಕಾರಣ ಪೀಠವು ವಿಚಾರಣೆಯನ್ನು ಜುಲೈಗೆ ಮುಂದೂಡಿತು. ಅಲ್ಲಿವರೆಗೆ ಮಧ್ಯಂತರ ತಡೆ ಆದೇಶ ಅನ್ವಯವಾಗಲಿದೆ.
ಇದನ್ನೂ ಓದಿ: ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದಕ್ಕೆ ಸ್ಪಷ್ಟ ಕಾರಣ ನೀಡಿದ ಅಮಿತ್ ಶಾ; ಏನದು?
ಮೇ 9 ರವರೆಗೆ ರಾಜ್ಯ ಸರ್ಕಾರದ ನಿರ್ಧಾರವನ್ನು ಜಾರಿಗೊಳಿಸುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಅವರು ನ್ಯಾಯಾಲಯಕ್ಕೆ ಈ ಹಿಂದೆ ಭರವಸೆ ನೀಡಿದ್ದರು. ಹೀಗಾಗಿ ಮಧ್ಯಂತರ ಆದೇಶವು ಮುಂದುವರಿಯಲಿದೆ.
2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಮುಸ್ಲಿಂ ಸಮುದಾಯಕ್ಕೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿ ರದ್ದು ಮಾಡಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಅಡಿ ಪರಿಗಣಿಸಲು ನಿರ್ಧರಿಸಿತ್ತು. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ 2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿತ್ತು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ