ಡಿನೋಟಿಫಿಕೇಷನ್ ಪ್ರಕರಣ: ತನಿಖೆ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಫೆ.14ಕ್ಕೆ ಮುಂದೂಡಿದ ಸುಪ್ರೀಂ
ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್(Supreme court) ಫೆಬ್ರವರಿ 14ಕ್ಕೆ ಮುಂದೂಡಿದೆ. ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಡಿನೋಟಿಫೈ ಪ್ರಕರಣದ(denotification case) ತನಿಖೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿದೆ.
ಭ್ರಷ್ಟಾಚಾರ ತಡೆ ಕಾಯ್ದೆಗೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಬಿಎಸ್‌ವೈ ವಿರುದ್ಧದ ತನಿಖೆಯನ್ನು ರದ್ದುಪಡಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿವಾದಿ ವಾಸುದೇವರೆಡ್ಡಿ ಪರ ವಕೀಲ ಕೆ.ವಿ.ಧನಂಜಯ ವಿರೋಧಿಸಿದ್ದು, ವಿಚಾರಣಾ ಹಂತದಲ್ಲಿರುವ ಪ್ರಕರಣಕ್ಕೆ ಈ ತಿದ್ದುಪಡಿ ಅನ್ವಯವಾಗಲ್ಲ ಎಂದರು. ಬಳಿಕ ವಾದ ಮಂಡನೆಗೆ ವಕೀಲರು 2 ಗಂಟೆಗಳ ಕಾಲಾವಕಾಶ ಕೇಳಿದರು. ಇದರಿಂದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿತು.
ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಐ.ಟಿ ಕಾರಿಕಾರ್ ನಿರ್ಮಾಣಕ್ಕೆ ಸ್ವಾಧೀನಪಡಿಕೊಂಡಿದ್ದ 8 ಎಕರೆ 10 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ವರದಿಯನ್ನು ತಿರಸ್ಕರಿಸಿರುವ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮರು ತನಿಖೆ ನಡೆಸುವಂತೆ ಆದೇಶಿಸಿತ್ತು.
2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು
2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಜರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಬಳಿಕ ಕೋರ್ಟ್ ಆದೇಶದಂತೆ 2025ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಅದನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.