ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ವಿಚಾರವಾಗಿ ನಡೆದ ಸಭೆಯಲ್ಲಿ ಹಂತ ಹಂತವಾಗಿ ಶಾಲೆ ಆರಂಭಿಸಲು ಅಧಿಕಾರಿಗಳು ಸಚಿವ ಸುರೇಶ್ ಕುಮಾರ್ ನೇತೃತ್ವದ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಮೊದಲ ಹಂತದಲ್ಲಿ 8-12ರವರೆಗೆ ಶಾಲೆ ಆರಂಭ ಸೂಕ್ತ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಅಧಿಕಾರಿಗಳು ಸಲಹೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಜೊತೆಗೆ, ಶಾಲೆಗೂ ಮೊದಲು ಹಾಸ್ಟೆಲ್ ಆರಂಭಿಸಲು ಸಹ ಅಧಿಕಾರಿಗಳು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಮೊದಲು ಹಾಸ್ಟೆಲ್ ವ್ಯವಸ್ಥೆ ಮಾಡಬೇಕು. ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ಇದಲ್ಲದೆ, ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ. ಈ ಕುರಿತು, ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸಚಿವರ ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಸಾರ್ವಜನಿಕ ಬಸ್ಗಳಿಗಿಂತ ಪ್ರತ್ಯೇಕ ಬಸ್ ವ್ಯವಸ್ಥೆ ನೀಡುವುದೇ ಉತ್ತಮ ಎಂದು ಸಹ ಸಲಹೆ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಇಂದು 2 ವಿಚಾರಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಬಗ್ಗೆ ಚುನಾವಣಾ ಆಯೋಗದ ಜೊತೆ ಚರ್ಚೆ ಬಳಿಕ ಘೋಷಣೆ ಮಾಡುತ್ತೇವೆ ಎಂದು ಹೇಳಿದರು. ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಪದವಿಪೂರ್ವ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಪದೋನ್ನತಿ ಮಾಡಲಾಗುವುದು. ಚುನಾವಣಾ ನೀತಿಸಂಹಿತೆ ಮುಗಿದ ಬಳಿಕ ವರ್ಗಾವಣೆ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು.
ಶಾಲೆಗಳ ಪ್ರಾರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಿಲ್ಲ. ಇನ್ನೂ ಎರಡು ದಿನಗಳ ಕಾಲ ಚರ್ಚೆ ನಡೆಸಲಾಗುವುದು. ಮುಂದಿನ ಎರಡು ದಿನ ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ, ಆರೋಗ್ಯ ಇಲಾಖೆ, SDMC ಜೊತೆ ಚರ್ಚೆಯ ಆಧಾರದ ಮೇಲೆ ಒಂದು ವರದಿ ಸಲ್ಲಿಸುತ್ತಾರೆ. ವಸತಿ ಶಾಲೆಗಳವರ ಜೊತೆ ಆಯುಕ್ತರು ಚರ್ಚಿಸಲಿದ್ದಾರೆ.
ಶಾಲೆ ಆರಂಭದ ಕುರಿತಂತೆ ಮಾಹಿತಿ ಸಂಗ್ರಹ ಮಾಡಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಶಾಲೆ ಆರಂಭವಾದ ಸ್ಥಿತಿಗತಿ ಬಗ್ಗೆ ಅವಲೋಕನ ಮಾಡುತ್ತೇವೆ. ಎಲ್ಲದರ ಬಗ್ಗೆ ಸಿಎಂಗೆ ವರದಿ ಸಲ್ಲಿಸಿ ಮನವರಿಕೆ ಮಾಡ್ತೇವೆ. ಬಳಿಕ ಏನು ಮಾಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಶಾಲೆ ಆರಂಭದ ಬಗ್ಗೆ 5 ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದರು.