AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ: ಯಾವಾಗ ಎಲೆಕ್ಷನ್

ಕರ್ನಾಟಕದಲ್ಲಿ ಮೂರುವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಚುನಾವಣೆ ನಡೆಸುವ ಸಂಬಮಧ ಹೈಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಸಿದ್ದು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಚುನಾವಣೆ ನಡೆಸುವ ಸಂಬಂಧ ಮಹತ್ವದ ಮಾಹಿತಿ ನೀಡಿದರು. ಈ ಮೂಲಕ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಹಾಗಾದ್ರೆ, ಚುನಾವಣೆ ಯಾವಾಗ? ಸರ್ಕಾರದ ಪರ ವಕೀಲ ಕೋರ್ಟ್​ಗೆ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ: ಯಾವಾಗ ಎಲೆಕ್ಷನ್
ಪ್ರಾತಿನಿಧಿಕ ಚಿತ್ರ
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Feb 17, 2025 | 3:23 PM

Share

ಬೆಂಗಳೂರು, (ಫೆಬ್ರವರಿ 17): ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ಇಂದು (ಫೆಬ್ರವರಿ 17) ನಡೆದಿದ್ದು, ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಸ್ಪಷ್ಟಪಡಿಸಿದರು. ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.

ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ‌ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡು ಹೈಕೋರ್ಟ್​, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ಎಲ್ಲಾ ಚುನಾವಣೆಗೆ ಬೇಕು: ಸಿದ್ದು ಹೆಸರು ದುರ್ಬಳಕೆ ಬೇಡ ಎಂದ ಡಿಕೆ ಶಿವಕುಮಾರ್

ಬಳಿಕ ಇದಕ್ಕೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ತಿಳಿಸಿದರು.

ಸರ್ಕಾರದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್​ ಅರ್ಜಿ ಇತ್ಯರ್ಥಪಡಿಸಿತು. ಈ ಮೂಲಕ ನನೆಗುದಿಗೆ ಬಿದ್ದಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆ ಕಾಲ ಕೂಡಿಬಂದಂತಿದೆ.

ಇನ್ನು ಈ ಸಂಬಂಧ ನಿನ್ನೆ (ಫೆಬ್ರವರಿ 16) ಅಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆ ಚುನಾವಣೆಗೆ ತಯರಾಗಿ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಸರ್ಕಾರದ ಪರ ವಕೀಲರು ಮೇ ತಿಂಗಳ ನಂತರ ಚುನಾವಣೆ ನಡೆಸುವುದಾಗಿ ಹೇಳಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Mon, 17 February 25