ತಾಯಿಯೊಡನೆ ಇಬ್ಬರು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು
ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ತಾಯಿ ಮತ್ತು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಮಲ್ಲಾಪುರದಲ್ಲಿ ನಡೆದಿದೆ. ತಾಯಿ ಮಂಜುಳಾ (30) ಹಾಗೂ ಮಕ್ಕಳಾದ ರಚನಾ (5), ಯಮುನಾ (7) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಡಿ. 18 ರಂದು ತಾಯಿ ಹಾಗೂ ಮಕ್ಕಳು ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಿಂದ ನಾಪತ್ತೆ ಆಗಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಡಿ. 21 ರಂದು ಮೂವರ ನಾಪತ್ತೆ ಕುರಿತು ಹೊಳೆಹೊನ್ನುರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಮಲ್ಲಾಪುರ ಗ್ರಾಮದ ಕೆರೆಯೊಂದರಲ್ಲಿ ತಾಯಿ ಮಂಜುಳಾ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.
ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ತಾಯಿಯು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



