ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಲೀಟರ್ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ KMF ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ.
ನಂದಿನ ಹಾಲಿನ ದರ ಪರಿಷ್ಕರಣೆ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಹಾಲು ಒಕ್ಕೂಟಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪ್ರತಿಕ್ರಿಯಿಸಿದ್ದು, ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ಕ್ಯಾಬಿನೆಟ್ನಲ್ಲಿಟ್ಟು ಒಪ್ಪಿಗೆ ಪಡೆದು ನಿರ್ಧಾರ ಪ್ರಕಟವಾಗಲಿದೆ. ನಾವು 5 ರೂ ಗೆ ಬೇಡಿಕೆ ಇಟ್ಟಿದ್ದೆವು. ಹಾಲಿನ ಉಪ ಉತ್ಪನ್ನಗಳ ದರ ನಂತರ ತೀರ್ಮಾನ ಆಗಲಿದೆ. ಹಾಲಿನ ಪುಡಿ ದರ ಏರಿಕೆಗೂ ಪ್ರಸ್ತಾವನೆ ಇಡಲಾಗಿದೆ ಎಂದು ಹೇಳಿದರು.
KMF ನಿರ್ದೇಶಕ ಹೆಚ್.ಡಿ.ರೇವಣ್ಣ ಮಾತನಾಡಿ, ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಪ್ರತಿ ಲೀಟರ್ಗೆ 5 ರೂ. ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ ಅಂತಿಮವಾಗಿ 3 ರೂ. ಹೆಚ್ಚಳಕ್ಕೆ ಸಭೆಯಲ್ಲಿ ಸಿಎಂ ಸಮ್ಮತಿಸಿದ್ದಾರೆ. ಹೆಚ್ಚಳವಾದ 3 ರೂ. ಹಾಲು ಉತ್ಪಾದಕರಿಗೆ ಹೋಗಬೇಕು ಅಂದಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು
ಸಿಎಂ ಜೊತೆ ಸಭೆ ಬಳಿಕ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಹೇಳಿಕೆ ನೀಡಿದ್ದು, ಹಾಲು ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ. ನಮ್ಮ ರಾಜ್ಯ ಅತಿ ಕಡಿಮೆ ದರದಲ್ಲಿ ಹಾಲು ಮಾರಾಟ ಮಾಡುತ್ತಿದ್ದೇವೆ. ಹಾಲು ಉತ್ಪಾದನಾ ದರ ಹೆಚ್ಚಾಗಿರುವುದರಿಂದ ರೈತರಿಗೆ ಹೊರೆ ಆಗುತ್ತಿದೆ. ದರ ಏರಿಕೆ ಅನಿವಾರ್ಯತೆ ಬಗ್ಗೆ ಸಭೆಯಲ್ಲಿ ಸಿಎಂಗೆ ಮನವರಿಕೆ ಮಾಡಿದೆವು. ಹೀಗಾಗಿ ನಂದಿನ ಹಾಲಿನ ದರ ಏರಿಕೆಗೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದರು.
ಕ್ಷೀರ ಭಾಗ್ಯ ಲಾಂಚ್ ಆಗಿ 10 ವರ್ಷ ಆದ ಹಿನ್ನಲೆ ದಶಮಾನೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ. ಮುಂದಿನ ಮಂತ್ರಿಮಂಡಲದಲ್ಲಿ ತೀರ್ಮಾನ ಕೈಗೊಳ್ಳೋದಾಗಿ ಹೇಳಿದ್ದಾರೆ. ನಾವು 39 ರೂ. ಪ್ರತೀ ಲೀಟರ್ ಹಾಲು ಮಾರಾಟ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಆಗಿದೆ. ಹೀಗಾಗಿ ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:01 pm, Fri, 21 July 23