ನಾಳೆಯ ಹವಾಮಾನ: ಮುಂದುವರೆದ ವರುಣಾರ್ಭಟ, ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜ್‌ಗಳಿಗೆ ರಜೆ
Tomorrow Weather Forecast : ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆಸಿದ್ದು, ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾರ್ಭಟ ಹೆಚ್ಚಾಗಿದ್ದು, ಜನರು ಪರದಾಡುವಂತಾಗಿದೆ. ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಂಗಳೂರು, (ಜುಲೈ 25): ಕರ್ನಾಟಕದಲ್ಲಿ (Karnataka) ಮುಂಗಾರು ಮಳೆ (monsoon rain)ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ (Karavali) ಮತ್ತು ಮಲೆನಾಡು (Maleadu) ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಬಿಟ್ಟು ಬಿಡದೇ ಮಳೆಯಾಗುತ್ತಿರುವುದರಿಂದ ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ, ಇನ್ನು ನಾಳೆ (ಜುಲೈ 26) ಕೂಡ ಹವಾಮಾನ ಇಲಾಖೆ, ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿದೆ. ಉಳಿದಂತೆ ರಾಜ್ಯಾದ್ಯಂತ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹಾಸನದಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹೀಗಾಗಿ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ನಾಳೆ (ಜುಲೈ 26) ರಜೆ ನೀಡಲಾಗಿದೆ. ಕಳೆದ 2 ದಿನಗಳಿಂದ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ: ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ
ಉತ್ತರ ಕನ್ನಡದ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ನಾಳೆ (ಜುಲೈ 26) ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಶಾಲೆಗಳಿಗೆ ರಜೆ
ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ರಜೆ ಘೋಷಿಸಿದ್ದಾರೆ. ಮೂಡಿಗೆರೆ, ಕಳಸ, ಶೃಂಗೇರಿ, ಎನ್‌ಆರ್ ಪುರ ಹಾಗೂ ಕೊಪ್ಪ ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಕಾಲೇಜುಗಳು ಎಂದಿನಂತೆ ತೆರೆದಿರಲಿವೆ ಎಂದು ತಿಳಿಸಿದ್ದಾರೆ.
ಹೊಸನಗರ-ತೀರ್ಥಹಳ್ಳಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಹೊಸನಗರ ಮತ್ತು ತೀರ್ಥಹಳ್ಳಿಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಎರಡು ತಾಲೂಕಿನ ಶಾಲಾ ಕಾಲೇಜ್ ಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:43 pm, Fri, 25 July 25