ನಾಳೆಯ ಹವಾಮಾನ: ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಕೆ, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ!
Tomorrow Weather Forecast :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಗಾಳಿ ಮಳೆ ಜೋರಾಗಿದೆ. ಕಳೆದೊಂದು ವಾರದಿಂದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆಗೆ ಜನ ಮನೆಯಿಂದ ಹೊರಬರದಂತಾಗಿದೆ. ಹೀಗಾಗಿ ನಾಳೆ (ಆಗಸ್ಟ್ 20) ಸಹ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು (ಆಗಸ್ಟ್.19): ಕಳೆದೊಂದು ವಾರದಿಂದ ಕರ್ನಾಟಕ ಮಳೆ (Karnataka Rains) ಅಬ್ಬರ ಜೋರಾಗಿದೆ. ಇದರಿಂದ ಕರೆ-ಕಟ್ಟೆಗಳು, ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಆಗಿವೆ. ಜಿಟಿ-ಜಿಟಿ ಮಳೆಯಿಂದಾಗಿ ಹೈರಾಣಾಗಿರುವ ಜನರಿಗೆ ಇನ್ನಷ್ಟು ದಿನ ಮಳೆ ಕಾಟ ಇರಲಿದೆ. ಹೌದು…ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಾಳೆ ಅಂದರೆ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ (School And College Holiday) ನೀಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದೇಶದ ಹಲವು ಭಾಗದಲ್ಲಿ ಭಾರಿಯಿಂದ ಅತಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷವಾಗಿ ದಕ್ಷಿಣ, ಪೂರ್ವ ಮತ್ತು ಪಶ್ಚಿಮ, ಕೇಂದ್ರ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?
ಬೆಳಗಾವಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು ಆ.19ರಮದು ರಜೆ ಘೋಷಣೆ ಮಾಡಲಾಗಿತ್ತು. ನಾಳೆಯೂ ಸಹ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ (ಬುಧವಾರ) ಕೂಡ ಬೆಳಗಾವಿ ಜಿಲ್ಲೆಯ ಅಂಗನವಾಡಿ, ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಮತ್ತೊಂದೆಡೆ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಮಲೆನಾಡು ಪ್ರದೇಶವನ್ನು ದಾಟಿ ಬಂದಿರುವ ವಾಯುಭಾರ ಕುಸಿದ ಮಳೆಗಾಳಿಯು ನಾಳೆ ಹಾವೇರಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದಲೇ ಹಾವೇರಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಹಿನ್ನೆಲೆಯುಲ್ಲಿ ನಾಳೆ (ಆ.20ರ ಬುಧವಾರ) ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಆದೇಶಿಸಿದ್ದಾರೆ.
ಯಾದಗಿರಿಯಲ್ಲಿ ಶಾಲಾ-ಕಾಲೇಜಿಗೆ ರಜೆ ಮುಂದುವರಿಕೆ
ಕಲ್ಯಾಣ ಕರ್ನಾಟ ಭಾಗದ ಯಾದಗಿರಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಹೀಗಾಗಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ಸಹ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಚನ್ನಬಸಪ್ಪ ಆದೇಶ ಹೊರಡಿಸಿದ್ದಾರೆ. ಬಿಟ್ಟು ಬಿಡದ ಜಿಟಿಜಿಟಿ ಮಳೆಯಾಗುತ್ತಿರುವುದ ಶಾಲಾ ಕಾಲೇಜುಗಳಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದು (ಆಗಸ್ಟ್ 19) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಸಹ ರಜೆ ವಿಸ್ತರಿಸಲಾಗಿದೆ.
ಧಾರವಾಡದಲ್ಲೂ ಶಾಲಾ-ಕಾಲೇಜುಗಳಿಗೆ ರಜೆ
ಧಾರವಾಡ ಜಿಲ್ಲೆಯಲ್ಲೂ ಸಹ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ(ಆಗಸ್ಟ್ 19) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ , ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಿ ಡಿಸಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ. ಈ ರಜೆಯನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಲು ಸೂಚಿಸಿದ್ದಾರೆ.
ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ಭಾರಿ ಮಳೆ ಮುನ್ಸೂಚನೆ
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ ತುಂತುರು ಮಳೆಯಾಗುತ್ತಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ




