
ಬೆಂಗಳೂರು, (ಜುಲೈ 24): ಕರ್ನಾಟಕದಲ್ಲಿ (Karnataka) ಜುಲೈ 27ರವರೆಗೂ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ, (Dakshina Kannada) ಉಡುಪಿ (Udupi) ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಪರಿಣಾಮ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜಿಗೆ (School And Colleges )ನಾಳೆ (ಜು.25) ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ (ಜುಲೈ 25) ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಸೂಚನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ನಾಳೆ (ಜು.25) ರಜೆ ಘೋಷಿಸಲಾಗಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಶಾಲೆ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದೆ. ಹೀಗಾಗಿ ಶುಕ್ರವಾರ (ಜು.25) ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿದ್ದಾರೆ. ಇದರ ಜೊತೆಗೆ ನದಿ ತೀರ,ತಗ್ಗು ಪ್ರದೇಶ, ಬೆಟ್ಟ ಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ(ಜುಲೈ 25) ಸಾಗರ, ಹೊಸನಗರ ತಾಲೂಕಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ದಂಡಾಧಿಕಾರಿಗಳು ಆದೇಶ ಹೊಡಿಸಿದ್ದಾರೆ.
ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಭೂಕುಸಿತ, ಗುಡ್ಡ ಕುಸಿತದ ಸಾಧ್ಯತೆಗಳ ಕುರಿತು ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವುದು ಒಳಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:05 pm, Thu, 24 July 25