ನಾಳೆಯ ಹವಾಮಾನ: ಆ.18 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಶಾಲೆಗಳಿಗೆ ರಜೆ
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 18 ರಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆಗಸ್ಟ್ 23ರವರೆಗೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು, ಆಗಸ್ಟ್ 17: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ (ಆ. 18) ಅತಿ ಭಾರಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಾಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ರಾಜ್ಯಾದ್ಯಂತ ಆಗಸ್ಟ್ 23ರವರೆಗೂ ಮಳೆಯಾಗಲಿದೆ.
ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಾಲೆಗಳಿಗೆ ರಜೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಆವತಿ ಹೋಬಳಿ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ಟ್ವಿಟರ್ ಪೋಸ್ಟ್
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಇಂದಿನಿಂದ ಆಗಸ್ಟ್ 20 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಹಾಗೂ 19 ರಂದು ಅತ್ಯಅಧಿಕ ಮಳೆಯಾಗುವ ಸಾಧ್ಯತೆಯಿದೆ. pic.twitter.com/EmPkdPjvC1
— Karnataka State Natural Disaster Monitoring Centre (@KarnatakaSNDMC) August 17, 2025
ಉಕ್ಕಿ ಹರಿಯುತ್ತಿರುವ ತುಂಗಾ ನದಿ
ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾ ಪೀಠದ ಬಳಿ ಕೆಲ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೆರೆ ಆತಂಕ ಎದರಾಗಿದೆ. ಈಗಾಗಲೇ ಗಾಂಧಿ ಮೈದಾನ, ಪ್ಯಾರಲಲ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ಒಳ ಹರಿವು ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ನದಿ ತೀರಕ್ಕೆ ಸ್ಥಳೀಯರು, ಪ್ರವಾಸಿಗರು ತೆರಳದಂತೆ ಸೂಚನೆ ನೀಡಲಾಗಿದೆ.
ಗಾಳಿಯ ವೇಗ
ಆಗಸ್ಟ್ 18ರವರೆಗೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Sun, 17 August 25




