
ಬೆಂಗಳೂರು, (ನವೆಂಬರ್ 20): ಬೈಕ್ ಟ್ಯಾಕ್ಸಿಯನ್ನೇ ನಂಬಿಕೊಂಡ ರೈಡರ್ ಗಳಿಗೆ ಶುಭ ಸುದ್ದಿ ಸಿಕ್ಕಿದೆ. ಇನ್ಮುಂದೆ ಕದ್ದು ಮುಚ್ಚಿ ಬೈಕ್ ಟ್ಯಾಕ್ಸಿಯಲ್ಲಿ ಓಡಾಬೇಕಾಗಿಲ್ಲ. ಯಾಕಂದ್ರೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೈಕ್ ಟ್ಯಾಕ್ಸಿ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇನ್ನು ಕೋರ್ಟಿನ ಈ ಆದೇಶ ಬೆನ್ನಲ್ಲೇ ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಎಜಿ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಎಂದಿದ್ದಾರೆ.
ಬೈಕ್ ಟ್ಯಾಕ್ಸಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಎಜಿ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ. ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಅನೇಕ ನಿಯಮ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವ ಸಹಪ್ರಯಾಣಿಕರು, ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆ, GPS ಅಳವಡಿಕೆ, ವಾಹನಕ್ಕೆ ವಿಮೆ, ಇತರ ದಾಖಲೆ ಪರಿಶೀಲನೆ ಸೇರಿದಂತೆ ಕೆಲವು ನಿಯಮಗಳನ್ನು ರೂಪಿಸಿ ಅವಕಾಶಕ್ಕೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾರಿಗೆ ಸಚಿವರ ಈ ಹೇಳಿಕೆಯನ್ನು ಗಮನಿಸಿದರೆ, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಅನಿವಾರ್ಯವಾಗಿದ್ದರಿಂದ ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ರೂಲ್ಸ್ ಜಾರಿಗೆ ತರುವ ಸಾಧ್ಯತೆಗಳಿವೆ. ಬೈಕ್ ದಾಖಲಾತಿ, ಜಿಪಿಎಸ್, ಹಾಗೂ ಅಪಘಾತ ವಿಮೆ ಸೇರಿದಂತೆ ಹಲವು ನಿಯಮಗಳನ್ನು ರೂಪಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಚಿಂತನೆಗಳು ನಡೆದಿವೆ.
ಒಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಗಳನ್ನು ಜಾರಿಗೆ ತರು ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆಗೆ ಮುಂದಾದಂತಿದ್ದು, ಮುಂದೆ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.