
ತುಮಕೂರು, ನ.27: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿ, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕಣಿವೆನಹಳ್ಳಿ ಗೇಟ್ ಬಳಿ ಶುಕ್ರವಾರ (ನವೆಂಬರ್ 27) ಸಂಜೆ ನಡೆದಿದೆ.
ಸಂಜೆ 5.30ರ ವೇಳೆಗೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಶ್ರೀನಿವಾಸ (45), ಮೇಘಶ (23) ಮತ್ತು ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲದ ಕಾರ್ಮಿಕರಾಗಿದ್ದಾರೆ ಎಂದು ಹೇಳಲಾಗಿದೆ.
ಮೃತರು ಪಾವಗಡದಿಂದ ಆಂಧ್ರಪ್ರದೇಶದ ಮಡಕಶಿರಾ ಕಡೆಗೆ ಒಂದೇ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಡಕಶಿರಾ ಕಡೆಯಿಂದ ಪಾವಗಡದತ್ತ ವೇಗವಾಗಿ ಬರುತ್ತಿದ್ದ ಕಾರು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮೂವರನ್ನು ತಕ್ಷಣವೇ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಣಿವೆನಹಳ್ಳಿ ಗೇಟ್ ಬಳಿ ರಸ್ತೆಯಲ್ಲಿರುವ ಗುಂಡಿಗಳನ್ನು ತಪ್ಪಿಸಲು ಹೋಗಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:49 pm, Fri, 27 November 26