ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್ ಎಂದಿದ್ದ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಬಿಎನ್‌ಎಸ್ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿದೆ. ಶಾಸಕರು, ಬಾಬ್ರಿ ಮಸೀದಿ ಧ್ವಂಸ ವಿಚಾರ ಪ್ರಸ್ತಾಪಿಸಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪವೂ ಇದೆ.

ಮುಖ್ಯಾಂಶಗಳು
- ರಾಹುಲ್ ಗಾಂಧಿ ಕುರಿತು ಹೇಳಿಕೆಗೆ ಎಫ್‌ಐಆರ್
- ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ
- ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಂದ ದೂರು
ಉಡುಪಿ, ಜುಲೈ 29: ಬಿಜೆಪಿ (BJP) ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕುರಿತು ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ದೂರಿನ ಪ್ರಕಾರ, ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಸಮೀಪ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಯಶಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಭಾಷಣದಲ್ಲಿ ಬಾಬ್ರಿ ಮಸೀದಿ ಧ್ವಂಸದ ವಿಚಾರವನ್ನು ಪ್ರಸ್ತಾಪಿಸಿ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ
ಅದೇ ಭಾಷಣದಲ್ಲಿ ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಬಗ್ಗೆ ಅವಾಚ್ಯ ಪದಗಳನ್ನು ಬಳಸಿದ್ದಾರೆ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ರೀತಿಯ ಭಾಷಣ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ಎಫ್‌ಐಆರ್ ಪ್ರಕಾರ, ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




