ಪರಶುರಾಮ ಪ್ರತಿಮೆ ಫೈಬರ್ ಅಲ್ಲ ಹಿತ್ತಾಳೆಯದು! ಪೊಲೀಸ್ ಚಾರ್ಜ್ ಶೀಟ್ನಲ್ಲಿ ಉಲ್ಲೇಖ
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿನ ಪರಶುರಾಮ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ತನಿಖೆಯಿಂದ ಪ್ರತಿಮೆಯನ್ನು ಹಿತ್ತಾಳೆಯಿಂದ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ, ಆದರೆ ಒಪ್ಪಂದದ ಪ್ರಕಾರ ಅದು ಕಂಚಿನಿಂದ ಇರಬೇಕಿತ್ತು. ಶಿಲ್ಪಿ ಕೃಷ್ಣ ನಾಯ್ಕ, ಅರುಣ್ ಕುಮಾರ್ ಮತ್ತು ಸಚಿನ್ ವೈ ಕುಮಾರ್ ಅವರ ವಿರುದ್ಧ ಹಲವು ಆರೋಪ ಕೇಳಿಬಂದಿವೆ.

ಮಂಗಳೂರು, ಜುಲೈ 14: ಕಾರ್ಕಳದ (Karkala) ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ (Parasurama Theme Park) ಸಂಬಂಧಿಸಿ ಮಹತ್ವದ ಬೆಳವಣಿಗೆ ಆಗಿದೆ. ಪರಶುರಾಮ ಥೀಂ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು “ಹಿತ್ತಾಳೆ”ಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ಇದೆ. ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ. ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದೆ. ಇನ್ನು, ಪ್ರತಿಮೆ ಫೈಬರ್ನದ್ದು ಎಂಬ ಕಾಂಗ್ರೆಸ್ ನಾಯಕರ ಆರೋಪ ಸುಳ್ಳಾಗಿದೆ.
ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿದ್ದಾರೆ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಇವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಏನಿದು ಪರಶುರಾಮ ಥಿಂ ಪಾರ್ಕ್ ವಿವಾದ
2023ರ ಜನವರಿ 27 ರಂದು ಪರಶುರಾಮ ಥೀಂ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮ ಮೂರ್ತಿಯನ್ನು ಫೈಬರ್ನಿಂದ ನಿರ್ಮಿಸಲಾಗಿದೆ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಸ್ಥಳೀಯರು ಆರೋಪ ಮಾಡಿದ್ದರು.
ಈ ಸಂಬಂಧ 2024 ರ ಜೂನ್ 21 ಕೃಷ್ಣ ಶೆಟ್ಟಿ ಎಂಬುವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ “ಕ್ರಿಶ್ ಆರ್ಟ್ ವರ್ಲ್ಡ್ ಸಂಸ್ಥೆಯು ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದಿತ್ತು. ಆದರೆ, ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಮೂರ್ತಿ ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ
ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.



