AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸರ್​ ತೀವ್ರ ನೋವಿನಿಂದ ಈ ಪತ್ರ ಬರೆಯುತ್ತಿದ್ದೇವೆ: ನಮ್ಮ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ ನಿಮ್ಮ ಪೊಲೀಸರು, ವಿದ್ಯಾರ್ಥಿಗಳ ಗಂಭೀರ ಆರೋಪ

ದೀಪಾವಳಿ ಪಟಾಕಿ ಪ್ರಕರಣದಲ್ಲಿ ಮಣಿಪಾಲ ಪೊಲೀಸರ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಮಾಯಕ ವಿದ್ಯಾರ್ಥಿಗಳ ಫ್ಲ್ಯಾಟ್‌ಗೆ ನುಗ್ಗಿ ಹಲ್ಲೆ ನಡೆಸಿ, ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆಂದು ವಿದ್ಯಾರ್ಥಿಗಳು ಸಿಎಂಗೆ ದೂರು ನೀಡಿದ್ದಾರೆ. ಪರೀಕ್ಷೆಗೆ ಸಿದ್ಧರಾಗಿದ್ದ ವಿದ್ಯಾರ್ಥಿಗಳಿಗೆ ದೈಹಿಕ, ಮಾನಸಿಕ ಹಿಂಸೆ ನೀಡಲಾಗಿದೆ. ನ್ಯಾಯಕ್ಕಾಗಿ ಸಿಎಂ ಮಧ್ಯಪ್ರವೇಶಕ್ಕೆ ಮನವಿ.

ಸಿಎಂ ಸರ್​ ತೀವ್ರ ನೋವಿನಿಂದ ಈ ಪತ್ರ ಬರೆಯುತ್ತಿದ್ದೇವೆ: ನಮ್ಮ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ ನಿಮ್ಮ ಪೊಲೀಸರು, ವಿದ್ಯಾರ್ಥಿಗಳ ಗಂಭೀರ ಆರೋಪ
ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಪೊಲೀಸರು ಸಿಸಿಟಿವಿಯಲ್ಲಿ ಸೆರೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 19, 2026 | 9:53 AM

Share

ಉಡುಪಿ, ನ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ಗಂಭೀರ ದೌರ್ಜನ್ಯದ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಸಂಬಂಧವಿಲ್ಲದ, ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಅಮಾಯಕ ವಿದ್ಯಾರ್ಥಿಗಳ ಫ್ಲ್ಯಾಟ್‌ಗೆ ನುಗ್ಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಣಿಪಾಲದ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ, ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯವೊಂದರ ಕೊಠಡಿಗಳಿಗೆ ನುಗ್ಗಿದ ಪೊಲೀಸ್ ಸಿಬ್ಬಂದಿ, ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಲ್ಲರೆದುರೇ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ವಿದ್ಯಾರ್ಥಿಗಳಿಗೆ ಥಳಿಸುತ್ತಿರುವ ದೃಶ್ಯಗಳು ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ.

ಫ್ಲ್ಯಾಟ್‌ನಿಂದ ವಿದ್ಯಾರ್ಥಿಗಳನ್ನು ಯಾವುದೇ ಸೂಕ್ತ ಕಾರಣ ನೀಡದೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಠಾಣೆಯಲ್ಲೇ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಸಬ್ ಇನ್‌ಸ್ಪೆಕ್ಟರ್ ಅಮಾಯಕ ವಿದ್ಯಾರ್ಥಿಗಳ ಮೇಲೆ ಥಳಿಸಿದ್ದಾರೆ ಮತ್ತು ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸಿಎಂಗೆ ವಿದ್ಯಾರ್ಥಿಗಳು ದೂರು:

ತಮ್ಮ ಭವಿಷ್ಯದ ಬಗ್ಗೆ ಆತಂಕಗೊಂಡಿರುವ ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. “ಗೌರವಾನ್ವಿತ ಮುಖ್ಯಮಂತ್ರಿಗಳೇ, ನಾವು ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಮಣಿಪಾಲ ಪೊಲೀಸರ ದೌರ್ಜನ್ಯದ ಕುರಿತು ತೀವ್ರ ನೋವಿನಿಂದ ಈ ಪತ್ರ ಬರೆಯುತ್ತಿದ್ದೇವೆ. ನಾವು ನವೆಂಬರ್ 8ರಂದು ನಮ್ಮ ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ ನವೆಂಬರ್ 10ರಂದು ಪೊಲೀಸ್ ಸಿಬ್ಬಂದಿ ನಮ್ಮ ಕೊಠಡಿಗಳಿಗೆ ನುಗ್ಗಿ, ಇತರರ ಸಮ್ಮುಖದಲ್ಲೇ ನಮ್ಮ ಮೇಲೆ ಹಲ್ಲೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ. ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿರಿಸಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿರುವ ಅಂಶಗಳ ನಿಖರತೆಯ ಬಗ್ಗೆ ನಮಗೆ ಗಂಭೀರ ಅನುಮಾನಗಳಿವೆ. ಎಂಜಿನಿಯರಿಂಗ್ ಪರೀಕ್ಷಾ ಸಮಯದಲ್ಲಿ ಯಾರೋ ಮಾಡಿದ ತಪ್ಪಿಗೆ ನಮ್ಮ ಮೇಲೆ ಕೇಸ್ ದಾಖಲಿಸಿರುವುದು ಆತಂಕ ತಂದಿದೆ. ದಯವಿಟ್ಟು ಮಧ್ಯಪ್ರವೇಶಿಸಿ ನಮಗೆ ನ್ಯಾಯ ಒದಗಿಸಿ” ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಇಡಿ ತನಿಖೆಯ ಸ್ಫೋಟಕ ಅಂಶ ಬಯಲು: ಅಭ್ಯರ್ಥಿಗಳ ಸಂದರ್ಶನ ಹೇಗೆ ನಡೆಯುತ್ತಿತ್ತು ಗೊತ್ತಾ?

ವಿವಾದದ ಹಿನ್ನೆಲೆ ಏನು?

ದೀಪಾವಳಿ ದಿನದಂದು ರಾತ್ರಿ ಮಣಿಪಾಲದ ಸಾರ್ವಜನಿಕ ರಸ್ತೆಗಳಲ್ಲಿ ಕೆಲವು ಕಿಡಿಗೇಡಿಗಳು ಸಾರ್ವಜನಿಕರು ಹಾಗೂ ಪೊಲೀಸರತ್ತ ಪಟಾಕಿ ಎಸೆದು ಹುಚ್ಚಾಟ ನಡೆಸಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಮಣಿಪಾಲ ಪೊಲೀಸರು 20 ಮಂದಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ನಿಜವಾಗಿ ಹುಚ್ಚಾಟ ನಡೆಸಿದವರನ್ನು ಬಿಟ್ಟು, ಪ್ಲಾಟ್​​​ ಅಮಾಯಕ ವಿದ್ಯಾರ್ಥಿಗಳನ್ನು ಬಂಧಿಸಿ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಇದೀಗ ಕೇಳಿಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸಿಎಂಗೆ ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More