ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ 5 ದಿನಗಳ ಕಾಲ ಅಂದರೆ ಜೂನ್ 25ರ ವರೆಗೆ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹವಾಮಾನ ಇಲಾಖೆಯ ವರದಿಯಂತೆ ಇಂದು ಬೆಳಿಗ್ಗೆಯಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದೆ. ಇನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಸದ್ಯ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಮೂರು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ.
ಇಂದು ನಸುಕಿನ ಜಾವದಿಂದಲೇ ಭಟ್ಕಳ, ಹೊನ್ನಾವರ, ಕುಮಟಾ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ಇನ್ನು ಒಂದು ವಾರ ಕಾಲ ನಿರಂತರ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆಗಿಂತ ಇಂದು ಮಳೆ ಪ್ರಮಾಣ ಜಾಸ್ತಿಯಾಗಿದೆ. ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ಅಂಕೋಲಾದಲ್ಲಿ ರಸ್ತೆಗಳು ಹೊಳೆಯಂತಾಗಿದೆ.
ಕುಸಿದು ಬಿದ್ದ ಸೇತುವೆ:
ಇನ್ನು ಮಳೆ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾರದ ಹಿಂದೆಯಷ್ಟೇ ಸಂಚಾರಕ್ಕೆ ಮುಕ್ತವಾಗಿದ್ದ ಸೇತುವೆ ಕುಸಿದಿದೆ. ಪಿಕಪ್ ವಾಹನ ಹೋಗಿದ್ದಕ್ಕೆ ಕಾಂಕ್ರೀಟ್ ಗೋಡೆ ಕಳಚಿ ಬಿದ್ದಿದೆ. ಈ ಘಟನೆ ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಬಳಿ ಸಂಭವಿಸಿದೆ.
ಇದನ್ನೂ ಓದಿ: ನಿಗೂಢ ಪ್ರಪಂಚವನ್ನು ಪರಿಚಯಿಸಲಿದೆ ‘ತುರ್ತು ನಿರ್ಗಮನ’; ಹೊಸತನದ ಕಥೆ ಹೊತ್ತು ತಂದ ಹೇಮಂತ್ ಕುಮಾರ್
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 24ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಲಿದೆ.
ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದೆ. ಜೂ.22ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 4 ದಿನ ‘ಹಳದಿ ಅಲರ್ಟ್’ ಘೋಷಿಸಲಾಗಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:04 pm, Tue, 21 June 22