ಕರ್ನಾಟಕದ ವಿವಿಗಳ ರಕ್ಷಣೆಗೆ ಕೇಂದ್ರ ಮುಂದಾಗಬೇಕು: ರಾಜ್ಯಸಭೆಯಲ್ಲಿ ಹೆಚ್ಡಿ ದೇವೇಗೌಡ ಮನವಿ
ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಕರ್ನಾಟಕದ ಸರ್ಕಾರಿ ವಿಶ್ವವಿದ್ಯಾಲಯಗಳ ಆರ್ಥಿಕ ಸಂಕಷ್ಟದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ವೇತನ ನೀಡಲು ಹಣದ ಕೊರತೆ, ಹುದ್ದೆಗಳ ಖಾಲಿ ಇರುವುದು ಮುಂತಾದ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅವರು, ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕುಲಪತಿ ನೇಮಕಾತಿಯಲ್ಲಿನ ವಿವಾದಗಳನ್ನೂ ತಪ್ಪಿಸುವಂತೆ ಸಲಹೆ ನೀಡಿದ್ದಾರೆ.

ನವದೆಹಲಿ, ಮಾರ್ಚ್ 12: ಕರ್ನಾಟಕದ ಸರ್ಕಾರಿ ವಿಶ್ವವಿದ್ಯಾಲಯಗಳು (Karnataka Universities) ಮರಣಶಯ್ಯೆಯಲ್ಲಿವೆ ಎಂದು ಜೆಡಿಎಸ್ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Deve Gowda) ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಚಿವಾಲಯದ ಕಾರ್ಯವೈಖರಿಯ ಕುರಿತು ರಾಜ್ಯಸಭೆಯಲ್ಲಿ (Rajya Sabha) ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿಗೆ ಸಂಬಳ ನೀಡಲು ವಿವಿಗಳ ಬಳಿ ಹಣವಿಲ್ಲ. ಕೇಂದ್ರ ಸರ್ಕಾರ ಅವುಗಳನ್ನು ರಕ್ಷಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಸಂಸ್ಥೆಗಳಾದ ಮೈಸೂರು ವಿಶ್ವವಿದ್ಯಾಲಯ ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಈ ಎರಡು ಸಂಸ್ಥೆಗಳಲ್ಲಿ ಹಲವಾರು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದ್ದಾರೆ.
‘ರಾಜ್ಯದಲ್ಲಿ 30 ಕ್ಕೂ ಹೆಚ್ಚು ಖಾಸಗಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಕೇಂದ್ರವು ರಾಜಕೀಯವನ್ನು ಬೆರೆಸದೆ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳಿಗೆ ಅನುದಾನವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಬೇಕು. ನನ್ನ ವಿನಂತಿಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂದು ಭಾವಿಸುತ್ತೇನೆ ಮತ್ತು ನಂಬುತ್ತೇನೆ’ ಎಂದು ದೇವೇಗೌಡ ಹೇಳಿದ್ದಾರೆ.
ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ವಿವಾದಗಳನ್ನು ತಪ್ಪಿಸಬೇಕು ಎಂದು ಮಾಜಿ ಪ್ರಧಾನಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಲಹೆ ನೀಡಿದ್ದಾರೆ.
ವಿವಾದ ಆಗದಂತೆ ನೋಡಿಕೊಳ್ಳುವುದು ಜವಾಬ್ದಾರಿ: ದೇವೇಗೌಡ
ಕುಲಪತಿಗಳ ನೇಮಕಾತಿ ವಿಷಯದ ಬಗ್ಗೆ ಯಾವುದೇ ವಿವಾದ ಉಂಟಾಗದಂತೆ ನೋಡಿಕೊಳ್ಳುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಹಲವಾರು ರಾಜ್ಯಗಳಲ್ಲಿ ಕುಲಪತಿಗಳ ನೇಮಕ ವಿಚಾರದಲ್ಲಿ ವಿವಾದ ಸೃಷ್ಟಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ರೀತಿಯ ವಿವಾದಗಳು ಮುಂದುವರಿಯಲು ಬಿಡಬಾರದು. ಈ ವಿವಾದವನ್ನು ಪರಿಹರಿಸಲು ಏನಾದರೂ ಕ್ರಮ ಕೈಗೊಳ್ಳಬೇಕೆಂದು ನಿಮ್ಮೆಲ್ಲರನ್ನೂ ಬೇಡಿಕೊಳ್ಳುತ್ತೇನೆ ಎಂದು ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ? ಆತಂಕಕ್ಕೆ ಒಳಗಾದ ಆದಿವಾಸಿ ವಿದ್ಯಾರ್ಥಿಗಳು
ಕರ್ನಾಟಕದ 9 ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕುರಿತಾದ ಪ್ರಸ್ತಾವದ ಬೆನ್ನಲ್ಲೇ ರಾಜ್ಯಸಭೆಯಲ್ಲಿ ದೇವೇಗೌಡರು ಆ ಬಗ್ಗೆ ಮಾತನಾಡಿದ್ದಾರೆ. ಇತ್ತ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಯೂ ವಿವಿಗಳನ್ನು ಮುಚ್ಚುವ ವಿಚಾರ ಚರ್ಚೆಗೆ ಬಂದಿದೆ. ಸರ್ಕಾರದ ನಿರ್ಧಾರವನ್ನು ವಿರೋಧಪಕ್ಷಗಳು ತೀವ್ರವಾಗಿ ಖಂಡಿಸಿವೆ. ಮತ್ತೊಂದೆಡೆ, ಆಡಳಿತಾರೂಢ ಕಾಂಗ್ರೆಸ್ ಶಾಸಕರೇ ಅನೇಕರು ಸರ್ಕಾರದ ಪ್ರಸ್ತಾವವನ್ನು ವಿರೋಧಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:58 am, Wed, 12 March 25